ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ,
ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಇನ್ನುಮುಂದೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಮಾದರಿಯಲ್ಲೇ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ ಶೇ. 33 ಅಂಕ ಪಡೆದರೂ ಉತ್ತೀರ್ಣರಾಗಲಿದ್ದಾರೆ. ಈ ಸಂಬಂಧ ರಾಜ್ಯ ಸರಕಾರವು ಗುರುವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಹೊಸ ನಿಯಮಗಳು 2025-26ನೇ ಶೈಕ್ಷಣಿಕ ವರ್ಷದಿಂದ ಮತ್ತು ನಂತರದ ಶೈಕ್ಷಣಿಕ ವರ್ಷದಿಂದ ಮಂಡಳಿಯ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಸರಾಸರಿ 33% ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ ಮತ್ತು ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.