ಬೆಳಗಾವಿ :
ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21 ರಂದು ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಡೆಯಲಿದ್ದು, ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ಜೂ.14) ನಡೆದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಶಾಲಾ – ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸಂಘ ಸಂಸ್ಥೆಗಳು, ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಆಸನದ ವ್ಯವಸ್ಥೆ, ಧ್ವನಿವರ್ಧಕ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯೋಗ ಕಾರ್ಯಕ್ರಮಕ್ಕೆ ಆಗಮಿಸಲು ಮಕ್ಕಳಿಗೆ ಬಸ್ ವ್ಯವಸ್ಥೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುವದು
ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಅಲ್ಪೋಪಹಾರ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಾಥಾ ಕಾರ್ಯಕ್ರಮ:
ಅಂತರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಜೂ.20 ರಂದು ಜಿಲ್ಲಾಧಿಕಾರಿ ಕಚೇರಿಯ ಆವರಣದಿಂದ ನಗರದ ಚನ್ನಮ್ಮ ವೃತ್ತ, ಪಾಲಿಟೆಕ್ನಿಕ್ ಕಾಲೇಜು ಮಾರ್ಗವಾಗಿ ಜಿಲ್ಲಾ ಪಂಚಾಯತ್ ವರೆಗೆ ಜಾಥಾ ಕಾರ್ಯಕ್ರಮ ನಡೆಯಲಿದೆ, ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣಧೋಳಿ, ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಜಿನೇಶ್ವರ ಪಡಾನಾಡ, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಶಾಲಾ, ಕಾಲೇಜು ಮುಖ್ಯೋಪಾಧ್ಯಯರು ಸಭೆಯಲ್ಲಿ ಉಪಸ್ಥಿತರಿದ್ದರು.