ಬೆಂಗಳೂರು:
ಕಲಘಟಗಿಯ ಕ್ಷೇತ್ರದ ಮಾಜಿ ಶಾಸಕ ಬಿಜೆಪಿಯ ಸಿ.ಎಂ.ನಿಂಬಣ್ಣವರ (76) ಭಾನುವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರ ಅಂತ್ಯಕ್ರಿಯೆ ಕಲಘಟಗಿಯಲ್ಲಿ ಸೋಮವಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಲಘಟಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂತೋಷ ಲಾಡ್ ವಿರುದ್ಧ ಗೆಲುವು ಸಾಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.
ಶಿಕ್ಷಕ ಹಾಗೂ ವಕೀಲಿ ವೃತ್ತಿಯ ಅನುಭವ ಹೊಂದಿದ್ದ ನಿಂಬಣ್ಣವರ ಅವರು 1995ರಲ್ಲಿ ಬಿಜೆಪಿ ಸೇರಿದ್ದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. ಲಿಂಗಾಯತ ಸಮಾಜದ ಮುಖಂಡರಾಗಿದ್ದ ಅವರು ಶಿವಪ್ಪಣ್ಣ ಜಿಗಳೂರು ಶಿಕ್ಷಣ ಸಂಸ್ಥೆ ಆರಂಭಿಸಿದ್ದರು.