ದೆಹಲಿ :
ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿಂದ ಗುರುವಾರ ಕರ್ನಾಟಕಕ್ಕೆ ಮತ್ತೊಮ್ಮೆ ಬಹುದೊಡ್ಡ ಹಿನ್ನಡೆ ದೊರೆತಿದೆ. ಪ್ರತಿದಿನವೂ ತಮಿಳುನಾಡಿಗೆ ನೀರು ಬಿಡಲು ನ್ಯಾಯಾಲಯ ಆದೇಶಿಸಿದೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕದ ಉನ್ನತ ಮಟ್ಟದ ನಿಯೋಗ, ಕಾವೇರಿ ನದಿ ನೀರು ಹಂಚಿಕೆ ಕುರಿತು ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ನ್ಯಾಯಾಲಯ ಇದೀಗ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದೆ.
ಪ್ರಸಕ್ತ ವರ್ಷ ಕರ್ನಾಟಕ ಸೇರಿದಂತೆ ದೇಶದಲ್ಲಿ ಮಳೆ ಅಭಾವ ಉಂಟಾಗಿದೆ. ಆದರೆ, ಇದೀಗ ನ್ಯಾಯಾಲಯದಿಂದ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಒದಗಿದಂತಾಗಿದೆ.
ಇಂದು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ನ್ಯಾಯಾಲಯ, ನಿತ್ಯವೂ 5000 ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಬಿ. ಆರ್. ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ. ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶ ಒಪ್ಪಬೇಕು. ಈ ಆದೇಶವನ್ನು ಕರ್ನಾಟಕ ಪಾಲಿಸಿ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಸೂಚನೆ ನೀಡಿದೆ. ಬರುವ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನವೂ 5000 ಕ್ಯೂಸೆಕ್ಸ್ ನೀರು ಬಿಡಬೇಕು. ನಂತರ ನೀರಿನ ಲಭ್ಯತೆ ವಾಸ್ತವಾಂಶ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ಎರಡು ರಾಜ್ಯಗಳು ಪ್ರಾಧಿಕಾರದ ಆದೇಶ ಪಾಲಿಸಬೇಕು ಎಂದು ಪೀಠ ತಿಳಿಸಿದೆ.