ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಒ ಹರ್ಷಲ್ ಬೋಯರ್ ಅವರನ್ನು ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. 2016ರ ಬ್ಯಾಚ್ನ
ಐಎಎಸ್ ಅಧಿಕಾರಿಯಾಗಿರುವ ಹರ್ಷಲ್ ಬೋಯರ್ ಬೆಳಗಾವಿ ಜಿಪಂ ಸಿಇಒ ಆಗಿ ಕೆಲ ತಿಂಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. 2018ನೇ ಬ್ಯಾಚ್ ಐಎಎಸ್ ಅಧಿಕಾರಿ ವಿಜಯಪುರ ಜಿಪಂ ಸಿಇಒ ರಾಹುಲ್ ಶಿಂಧೆ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು :
ಹಣಕಾಸು ಇಲಾಖೆ ಕಾರ್ಯದರ್ಶಿ ಡಾ.ಎಂ. ಟಿ.ರೆಜು ಸೇರಿದಂತೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಜಿ.ಸತ್ಯವತಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆಗೆ, ಹಣಕಾಸು ಕಾರ್ಯದರ್ಶಿ ಡಾ.ಎಂ.ಟಿ.ರೆಜು ಅವರನ್ನು ಕರ್ನಾಟಕ ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿದ್ದ ತುಳಸಿ ಮದ್ದಿನೇನಿ ಅವರನ್ನು ಪಶು ಸಂಗೋಪನೆ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗ ಮಾಡಲಾಗಿದೆ.
ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಯಾಗಿದ್ದ ಸಲ್ಮಾಕೆ. ಫಹಿಮಾ ಅವರನ್ನು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ, ಕರ್ನಾಟಕ ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಉಜ್ವಲ್ ಕುಮಾರ್ ಘೋಷ್ ಅವರನ್ನು ಡಿಪಿಎಆರ್ ಕಾರ್ಯದರ್ಶಿ ಹುದ್ದೆಗೆ, ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಶರ್ಮಾ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರ ಹುದ್ದೆಗೆ, ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಬೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಅಟಲ್ ಜನ ಸ್ನೇಹಿ ಕೇಂದ್ರದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಮಾಡಿದೆ.
ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸಂಗಪ್ಪ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯನಿರ್ವಾಹಕ ಅಧಿಕಾರಿ, ಉಡುಪಿ ಜಿಲ್ಲಾ ಪಂಚಾಯ್ತಿ ಸಿಇಒ ಎಚ್. ಪ್ರಸನ್ನ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ, ಬಿಬಿಎಂಪಿ ವಿಶೇಷ ಭೂಸ್ವಾಧೀನಾಧಿಕಾರಿ ಪ್ರತೀಕ್ ಬಾಯೆಲ್ ಅವರನ್ನು ಉಡುಪಿ ಜಿಲ್ಲಾ ಪಂಚಾಯ್ತಿ ಸಿಇಒ, ಮಧುಗಿರಿ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ರಿಷಿ ಆನಂದ್ ಅವರನ್ನು ವಿಜಯಪುರ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ನೇಮಕ ಮಾಡಲಾಗಿದೆ.