ಬೆಳಗಾವಿ : ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಈ ಬಾರಿ ಬೆಳಗಾವಿ ಜಿಲ್ಲೆ ಖಾನಾಪುರದ ಮಾಜಿ ಶಾಸಕಿ ಹಾಗೂ ವೈದ್ಯೆ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಲಿದೆ.
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರ ಧರ್ಮಪತ್ನಿ ಆಗಿರುವ ಅಂಜಲಿ ನಿಂಬಾಳ್ಕರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಖಾನಾಪುರ ಮತಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಹೀಗಾಗಿ ಅವರು ತಮ್ಮ ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರವನ್ನು ಆಯ್ದುಕೊಂಡಿದ್ದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದುಕೊಳ್ಳುವಲ್ಲಿ ಅವರು ಬಹುತೇಕ ಯಶಸ್ವಿಯಾಗಿದ್ದಾರೆ. ಅವರ ಹೆಸರು ಸಂಭವನೀಯರ ಪಟ್ಟಿಯಲ್ಲಿ ಇದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.
ಕರ್ನಾಟಕದ 16 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಅಖೈರುಗೊಳಿಸಿದ್ದು, 5 ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ.
ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕೇಂದ್ರ ಚುನಾವಣಾ ಸಮಿತಿಯು ಬುಧವಾರ ಮತ್ತೆ ಸಭೆ ಸೇರಲಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ (ಬೆಂಗಳೂರು ದಕ್ಷಿಣ), ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ), ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃಣಾಲ್ (ಬೆಳಗಾವಿ), ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ (ಬಾಗಲಕೋಟೆ) ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ (ಬೀದರ್) ಟಿಕೆಟ್ ಅಂತಿಮಗೊಳಿಸಲಾಗಿದೆ.
ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ಬಳ್ಳಾರಿ ಕ್ಷೇತ್ರಗಳಿಗೆ ಹಲವು ಮಂದಿ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಇನ್ನಷ್ಟೇ ಮಾಡಬೇಕಿದೆ.
ಗುಲಬರ್ಗಾ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಕೃಷ್ಣ ದೊಡ್ಡಮನಿ ಅವರನ್ನು ಉಮೇದುವಾರರನ್ನಾಗಿ ಮಾಡಲಾಗಿದೆ. ದಾವಣಗೆರೆ ಕ್ಷೇತ್ರದಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸೊಸೆ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.
ಐಐಎಂನ ಮಾಜಿ ಪ್ರಾಧ್ಯಾಪಕ, ಈ ಹಿಂದೆ ರಾಜ್ಯಸಭಾ ಸದಸ್ಯರಾಗಿದ್ದ ರಾಜೀವ್ ಗೌಡ ಅವರಿಗೆ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರಕ್ಕೆ ರಾಜ್ಯಸಭೆಯ ಮಾಜಿ ಉಪಸಭಾಪತಿ ಮನ್ಸೂರ್ ಅಲಿಖಾನ್ ಅವರ ಪುತ್ರ ಕೆ. ರಹ್ಮಾನ್ ಖಾನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಈ ಹಿಂದೆ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು.