ಬೆಳಗಾವಿ: ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ಮಾಡಿದ ಕೆಲಸಗಳನ್ನು ಜನತೆಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಬೆಳಗಾವಿ- ಚಿಕ್ಕೋಡಿ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬೆಳಗಾವಿ ಲೋಕಸಭೆ ಚುನಾವಣೆ ನಿಮಿತ್ತ ಹಮ್ಮಿಕೊಂಡಿದ್ದ ಬೆಳಗಾವಿ ಉತ್ತರ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಲೋಕಸಭಾ ಕ್ಷೇತ್ರದಲ್ಲಿ ಮೃಣಾಲ್ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಏಕೆಂದರೆ ಎದುರಾಳಿಗಳಲ್ಲಿ ಒಗ್ಗಟ್ಟಿಲ್ಲ ಎಂದ ಅವರು, ಬೆಳಗಾವಿ ಉತ್ತರ ಕ್ಷೇತ್ರದ ಕಾರ್ಯಕರ್ತರು ಶಾಸಕ ಆಸೀಫ್ ರಾಜು ಸೇಠ್ ಅವರ ನೇತೃತ್ವದಲ್ಲಿ ಚುನಾವಣಾ ಎದುರಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಎಲ್ಲವನ್ನೂ ಒಂದೇ ಬಾರಿ ಕಲಿಯಲು ಸಾಧ್ಯವಿಲ್ಲ. ಅಭ್ಯರ್ಥಿಗಳು ಸಣ್ಣವರು ಇದ್ದಾರೆ ಎನ್ನುವುದು ಪ್ರಮುಖವಲ್ಲ. ಅಭ್ಯರ್ಥಿಗಳು ಸಾಕಷ್ಟು ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ಅವಕಾಶ ಇತ್ತು. ಆದರೆ ತಮ್ಮ ಅಮೂಲ್ಯ ಜೀವನ ತ್ಯಾಗ ಮಾಡಿ ನಿಮ್ಮ ಸೇವೆ ಮಾಡಲು ಬಯಸಿದ್ದಾರೆ. ಅದ್ದರಿಂದ ಅವರಿಬ್ಬರನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲೆ ಇದೆ. ಕಾರಣ ಎಲ್ಲರೂ ಒಗ್ಗಟ್ಟಿನಿಂದ ಎರಡು ಕ್ಷೇತ್ರದ ಅಭ್ಯರ್ಥಿಗಳನ್ನ ಗೆಲ್ಲಿಸಲು ಪಣ ತೊಡಬೇಕು ಎಂದರು.
ರೈತರ ಆದಯ ದುಪ್ಪಟ್ಟು ಮಾಡುತ್ತೇನೆ, ಬುಲೆಟ್ ಟ್ರೇನ್ ತರುತ್ತೇನೆ ಎಂದು ಹೇಳುವ ಪ್ರಧಾನಿ ಮೋದಿ ಅವರು ಒಂದಲ್ಲ, ಎರಡಲ್ಲ, ಸಾವಿರಾರು ಸುಳ್ಳು ಹೇಳುವ ಮೂಲಕ ದೇಶದ ಜನತೆಗೆ ಮೋಸ ಮಾಡಿದ್ದಾರೆ. ಅಲ್ಲದೇ ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದ ಮೇಲೆ ಉದ್ಯಮಗಳ ಅಭಿವೃದ್ದಿ ಆಗಿದೆ. ಆದರೆ ಬಡ ಮತ್ತು ಮಧ್ಯಮ ವರ್ಗದವರಿಗೆ ಯಾವುದೇ ಪ್ರಯೋಜನವಾಗಿಲ್ಲ. ಉದ್ಯಮಿಗಳಿಗೆ ಸಾವಿರಾರು ಕೋಟಿ ರೂ. ರಿಯಾಯಿತಿ ನೀಡಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯಲಾಗಿದೆ ಎಂದು ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಯೋಜನೆಗಳನ್ನು ಪ್ರತಿ ಮನೆಗೆ ತಿಳಿಸಿ: ಕಾಂಗ್ರೆಸ್ ನುಡಿದಂತೆ ನಡೆದಿದೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮುಖ್ಯವಾಗಿ ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಮನೆಮನೆಗೆ ತಲುಪಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಸಹಕರಿಸಬೇಕು. ಕಾಂಗ್ರೆಸ್ ಕಾರ್ಯಕರ್ತರು ಅಭಿವೃದ್ಧಿ ಹಾಗೂ ಪಕ್ಷ ದ ತತ್ವ ಸಿದ್ಧಾಂತಗಳನ್ನು ಜನರಿಗೆ ಮುಟ್ಟಿಸುವ ಮೂಲಕ ಬೂತ ಮಟ್ಟದಿಂದ ಪಕ್ಷ ಸಂಗಟಿಸಲು ಕಾರ್ಯಕರ್ತರು ಸಿದ್ದರಾಗಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರ ಬಹಳ ವಿಶೇಷವಾಗಿದ್ದು, ಪಕ್ಷದ ವರಿಷ್ಠರು ಯುವಕರಿಗೆ ಟಿಕೆಟ್ ನೀಡಿದ್ದು, ಇಬ್ಬರನ್ನು ಗೆಲ್ಲಿಸಲು ಸತೀಶ್ ಅಣ್ಣಾ ಅವರ ನೇತ್ರತ್ವದಲ್ಲಿ ಪಣ ತೊಟ್ಟಿದ್ದೇವೆ ಎಂದರು.
ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಉಪಯೋಗ ಆಗಿವೆ. ನಿಮ್ಮ ಬಗ್ಗೆ ಕಾಳಜಿ ಇರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆರ್ಶೀವದಿಸಿ ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರಜ್ಞಾವಂತರ ಮತಕ್ಷೇತ್ರ. ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನಿಮ್ಮ ಅಮೂಲ್ಯ ಮತ ನೀಡಬೇಕೆಂದು ತಿಳಿಸಿದರು.
ರಾಜ್ಯದ ಸಂಸದರು ರಾಜ್ಯದ ಸಮಸ್ಯೆ ಗಳ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತಲಿಲ್ಲ. ದನಿ ಇಲ್ಲದ ಬಿಜೆಪಿ ಸಂಸದರನ್ನು ಯಾಕೆ ಆಯ್ಕೆ ಮಾಡಬೇಕೆಂದು ಪ್ರಶ್ನಿಸಿದರು.
ಶಾಸಕ ಆಸೀಫ್ (ರಾಜು )ಸೇಠ್ ಮಾತನಾಡಿ, ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿಯಾಗಿದೆ. ಅದಕ್ಕಾಗಿ ಚುನಾವಣೆ ಗೆಲ್ಲಲು ಕಾರ್ಯಕರ್ತರು ಇಂದಿನಿಂದಲೇ ಸನ್ನದ್ಧರಾಗಬೇಕೆಂದು ಕರೆ ನೀಡಿದರು.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಬೇರೆಯವರಿಗೆ ಟಿಕೆಟ್ ನೀಡಿದೆ. ಆದರೆ ಬೇರೆ ಊರಿನಿಂದ ಬಂದವರಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಕಾರಣ ಸ್ಥಳೀಯವಾಗಿ ನಿನಗೆ ದೊರಕುವ ಕಾಂಗ್ರೆಸ್ ಅಭ್ಯರ್ಥಿ ಮೃನಾಲ್ ಹೆಬ್ಬಾಳಕರ್ ಅವರನ್ನು ಗೆಲ್ಲಿಸೋಣ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಮೃನಾಲ್ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಇಬ್ಬರೂ ಯುವಕರಿಗೆ ಟಿಕೆಟ್ ನೀಡಿದ ವರಿಷ್ಠರಿಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲಾ ಭಾಷೆ ಮಾತನಾಡುವ ಜನ ಇದ್ದಾರೆ. ಕಾರಣ ನಿವೆಲ್ಲರೂ ನನಗೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಮಾಜಿ ಸಚಿವ ಎ.ಬಿ.ಪಾಟೀಲ್ ಮಾತನಾಡಿ, ಕಾಂಗ್ರೆಸ್ ಪಕ್ಷ ಯುವಕರಿಗೆ ಆದ್ಯತೆ ನೀಡುತ್ತಿದ್ದು, ಯವಕರು ರಾಜಕೀಯವಾಗಿ ಬೆಳೆಯಬೇಕು. ಯುವಕರಿಗೆ ಸದಾ ನಮ್ಮ ಬೆಂಬಲ ಇದ್ದೆ ಇರುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶಶಿಕಾಂತ ನಾಯಕ್, ಎ.ಬಿ. ಪಾಟೀಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಸದಸ್ಯ ಕಿರಣ ಸಾಧುನ್ನವರ್, ಕಾಂಗ್ರೆಸ್ ಮುಖಂಡರಾದ ಅಮನ್ ಸೇಠ್, ಬಸವರಾಜ್ ಶೀಂಗಾವಿ, ಮಲ್ಲೇಶ ಚೌಗಲೆ, ಆರ್.ಕೆ. ಪಾಟೀಲ್, ರಾಜಾ ಸಲೀಂ ಸೇರಿದಂತೆ ಮುಂಚೂಣಿ ಘಟಕದ ಪದಾಧಿಕಾರಿಗಳು, ಸಾವಿರಾರು ಕಾರ್ಯಕರ್ತರು ಇದ್ದರು.