ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಮತಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಮತ ಕ್ಷೇತ್ರದಲ್ಲಿ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಬಿಗ್ ಫೈಟ್ ನಡೆಯುವ ಸಾಧ್ಯತೆ ಇದೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ ಎದುರು ಡಿ.ಕೆ. ಸುರೇಶ್ ಪರಾಭವಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಚನ್ನಪಟ್ಟಣ ವಿಧಾನಸಭಾ ಮತಕ್ಷೇತ್ರದಲ್ಲಿ ಕಣಕ್ಕೆ ಇಳಿಯುವ ಸಾಧ್ಯತೆ ಬಗ್ಗೆ ಜೆಡಿಎಸ್ ನಾಯಕರು ಇದೀಗ ಕುತೂಹಲ ಹೊಂದಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಸಹೋದರ ಸುರೇಶ್ ಅವರನ್ನು ಚನ್ನಪಟ್ಟಣದಲ್ಲಿ ಕಣಕ್ಕಿಳಿಸಿ ವಿಧಾನಸಭೆಗೆ ಕರೆತರಲು ಮುಂದಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಆಗಿರುವ ಹಿನ್ನಡೆಗೆ ಸೇಡು ತೀರಿಸಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ಡಿ.ಕೆ. ಸುರೇಶ್ ಚನ್ನಪಟ್ಟಣದಲ್ಲಿ ಕಣಕ್ಕಿಳಿದರೆ ಈಗಿನಿಂದಲೇ ಸಿದ್ಧತೆ ನಡೆಸ ಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರು ಈಗಲೇ ಕಾರ್ಯ ಪ್ರವೃತ್ತರಾಗುತ್ತಿದ್ದಾರೆ.
ಈ ನಡುವೆ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧೆಗೆ ಉತ್ಸುಕರಾಗಿದ್ದಾರೆ. ಆದರೆ, ಜೆಡಿಎಸ್ ಶಾಸಕರಿದ್ದ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟರೆ ವಿಧಾನಸಭೆಯಲ್ಲಿ ಪಕ್ಷದ ಬಲ ಕುಸಿಯುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆ ಇದೆ.