ರಾಜ್ಯದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊಲದ ಪ್ರಾಶಸ್ತ್ರದ ಮತಗಳಲ್ಲಿಯೇ ಜಯ ಗಳಿಸಿದ್ದಾರೆ. ಟಿಕೆಟ್ ಸಿಗದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘುಪತಿ ಭಟ್ ಸೋತಿದ್ದಾರೆ. ಬಿಜೆಪಿ ಅಭ್ಯರ್ಥಿ ಸರ್ಜಿ 37,627 ಮತ ಪಡೆದರೆ, ಕಾಂಗ್ರೆಸ್ನ ಆಯನೂರು ಮಂಜುನಾಥ್ 13,516 ವೋಟ್ ಗಳಿಸಿದರು. ರಘುಪತಿ ಭಟ್ 7,039 ಮತ್ತು ಎಸ್ಪಿ ದಿನೇಶ್ 2,518 ಮತ ಪಡೆದರು.
ಬೆಂಗಳೂರು: ಪದವೀಧರರ ಹಾಗೂ ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್ಗೆ ನಡೆದಿದ್ದ ಚುನಾವಣೆಯಲ್ಲಿ ಹಿಂದೆ ಗೆದ್ದಿದ್ದ ಎರಡು ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಜೆಡಿಎಸ್ ಸಫಲವಾಗಿದೆ. ಒಂದು ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದ್ದು ಇನ್ನೊಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೆಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ಮತದಾನ ನಡೆದಿತ್ತು. ಗುರುವಾರ ಮತ ಎಣಿಕೆ ನಡೆಯಿತು.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್ಗೆ ಬಿಟ್ಟುಕೊಡಲಾಗಿತ್ತು. 2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಚುನಾವಣೆಗೆ ಕೆಲ ದಿನಗಳ ಮೊದಲು ಜೆಡಿಎಸ್ಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.
ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ರದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. 4,622 ಮತಗಳ ಅಂತರದಿಂದ ಗೆದ್ದಿದ್ದಾರೆ. ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ. ಮರಿತಿಬ್ಬೇಗೌಡ ಪಕ್ಷ ತೊರೆದರೂ ತನ್ನ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಧಾನಪರಿಷತ್ನ ಜೆಡಿಎಸ್ ಸದಸ್ಯ ಎಸ್.ಎಲ್. ಬೋಜೇಗೌಡ ಪುನರಾಯ್ಕೆ ಬಯಸಿ ಕಣಕ್ಕೆ ಇಳಿದಿದ್ದರು. ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳಿಂದ ಗೆಲುವು ಸಾಧಿಸಿದರು. ಬೋಜೇಗೌಡ 9,829 ಮತ, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ 4,562 ಮತ ಪಡೆದರು.
ನೈರುತ್ಯ ಪದವೀಧರ ಕ್ಷೇತ್ರ ನಾಲ್ಕು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಐದು ಅವಧಿ ಬಿಜೆಪಿಯ ಡಿ.ಎಚ್. ಶಂಕರಮೂರ್ತಿ, ಒಂದು ಅವಧಿ ಆಯನೂರು ಮಂಜುನಾಥ್ ಗೆಲುವು ಕಂಡಿದ್ದರು. ಈ ಬಾರಿ ಬಿಜೆಪಿ ತೊರೆದ ಆಯನೂರು ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದರು. ಬಿಜೆಪಿ ಡಾ.ಧನಂಜಯ ಸರ್ಜಿ ಅವರನ್ನು ಕಣಕ್ಕೆ ಇಳಿಸಿತ್ತು. ಎಲ್ಲ ಸುತ್ತುಗಳಲ್ಲೂ ಸರ್ಜಿ ಮುನ್ನಡೆ ಕಾಯ್ದುಕೊಂಡು ಕೊನೆಗೂ ಜಯಭೇರಿ ಗಳಿಸಿದ್ದಾರೆ. ಇಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿದ್ದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಸೋಲು ಕಂಡಿದ್ದಾರೆ.
ಬಿಜೆಪಿಯ ಮತ್ತೊಂದು ಭದ್ರಕೋಟೆಯಾದ ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ವೈ.ಎ.ನಾರಾಯಣಸ್ವಾಮಿ ಕಾಂಗ್ರೆಸ್ನ ಡಿ.ಟಿ.ಶ್ರೀನಿವಾಸ್ ಎದುರು ಹಿನ್ನಡೆ ಕಂಡಿದ್ದರೆ, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಾಮೋಜಿ ಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಅವರು ಕಾಂಗ್ರೆಸ್ನ ವಿಧಾನ ಪರಿಷತ್ ಹಾಲಿ ಸದಸ್ಯ ಚಂದ್ರಶೇಖರ ಪಾಟೀಲ ಎದುರು ಮುನ್ನಡೆ ಸಾಧಿಸಿದ್ದಾರೆ.