ಢಾಕಾ: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಆರ್ಥಿಕ ತಜ್ಞ ಮೊಹಮ್ಮದ್ ಯೂನುಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಆ.8 ರಂದು (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯ ಸೇನಾ ಅಧಿಕಾರಿ ವಾಕರ್-ಉಜ್-ಜಮನ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೊಹಮ್ಮದ್ ಯೂನುಸ್ ನಾಯಕತ್ವದ ಸಲಹಾ ಮಂಡಳಿಯು 15 ಸದಸ್ಯರು ಗುರುವಾರ ರಾತ್ರಿ 8 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು.
84 ವರ್ಷದ ಅರ್ಥಶಾಸ್ತ್ರಜ್ಞ ಮೊಹಮ್ಮದ್ ಯೂನುಸ್ ಅವರನ್ನು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಕ ಮಾಡಿದ್ದರು.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಡಿಢೀರ್ ರಾಜೀನಾಮೆಯಿಂದಾಗಿ ಬಾಂಗ್ಲಾದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ವಿದ್ಯಾರ್ಥಿ ಆಂದೋಲನದ ಸಂಯೋಜಕರೊಂದಿಗೆ ಶಹಾಬುದ್ದೀನ್ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.