ಬೆಳಗಾವಿ: ಜಿಲ್ಲೆಯ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 41 ಜನ ಅಸ್ವಸ್ಥಗೊಂಡಿದ್ದಾರೆ.
ತೀವ್ರ ಅಸ್ವಸ್ಥತೆ ಹೊಂದಿದ ಮೂವರು ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಇತರ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವಾರದಿಂದ ಗ್ರಾಮದ ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಇದು ಸೋಮವಾರ ಹತೋಟಿ ಮೀರಿದೆ. ಒಂದೇ ದಿನ 41 ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡಿರುವವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಈರವ್ವ ಗಾಳಿಮಠ(63) ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೆಲವರು ಚಚಡಿ ಮತ್ತು ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಬೋರ್ ವೆಲ್ ಮೂಲಕ ನೀರು ತುಂಬಿಸಿ ಅಲ್ಲಿಂದ ಮನೆಗಳಿಗೆ ನಳಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮನೆಗಳಿಗೆ ನೀರು ಪೂರೈಸುವ ಪೈಪ್ ಲೈನ್ ಗೆ ಚರಂಡಿ ನೀರು ಸೇರಿಕೊಂಡಿದ್ದರಿಂದ ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದು ಗ್ರಾಮಸ್ಥರ ಆರೋಪ.
ಸದ್ಯ ಚಚಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಪರಿಸರದಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಂಡಿದೆ.
ಡಿಎಚ್ಒ ಮಹೇಶ ಕೋಣಿ, ಚಚಡಿಗೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿ ಕಾಣಿಸಿಕೊಂಡಿದೆ. ಯಾವುದೇ ಪ್ರಾಣ ಹಾನಿ ಆಗಿಲ್ಲ. ತೀವ್ರ ಅಸ್ವಸ್ಥಗೊಂಡವರನ್ನು ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ತಿಳಿಸಲಾಗಿದೆ ಎಂದು ವಿವರಿಸಿದರು. ಶಾಸಕ ಮಹಾಂತೇಶ ಕೌಜಲಗಿ ಅವರು ಚಚಡಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಚರ್ಡಿಗ ಗ್ರಾಮದ ಪಿಡಿಓ ಅವರ ನಿರ್ಲಕ್ಷವೇ ಇದಕ್ಕೆ ಕಾರಣ ಎನ್ನುವುದು ಗ್ರಾಮಸ್ಥರ ಗಂಭೀರ ಆರೋಪವಾಗಿದೆ. ನೀರು ಶುದ್ದೀಕರಣ ಘಟಕಗಳಿವೆ. ಆದರೆ, ಅವುಗಳನ್ನು ಶುದ್ಧೀಕರಣ ಮಾಡಿಲ್ಲ. ವಾಂತಿ-ಭೇದಿ ಆರಂಭವಾಗುತ್ತಲೇ ನೀರನ್ನು ಶುದ್ಧೀಕರಣ ಮಾಡಿದ್ದರೆ ಇಷ್ಟೊಂದು ಸಮಸ್ಯೆ ಸೃಷ್ಟಿಯಾಗುತ್ತಿರಲಿಲ್ಲ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯ ಮಾಡಿದ್ದಾರೆ.