ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾದರೇ ಸಂಬಂಧಿಸಿದ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು ಸೂಚನೆ ನೀಡಿದರು.
ಬೆಂಗಳೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕೇಂದ್ರ ಕಚೇರಿಯಿಂದ ಬೆಳಗಾವಿ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಸಮನ್ವಯ ಸಭೆಯ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಪಂ ಸಿಇಒ ರಾಹುಲ್ ಶಿಂಧೆ ಅವರು, ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಡಿಯಲ್ಲಿ ನಾಲ್ಕು ಹಾಗೂ ಚಿಕ್ಕೋಡಿ ವಿಭಾಗದಲ್ಲಿ ಒಟ್ಟು 9 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪ್ರಗತಿಯಲ್ಲಿವೆ. ಈ ಯೋಜನೆಗಳ ನಕ್ಷೆ ಹಾಗೂ ವಿನ್ಯಾಸಗಳಲ್ಲಿ ವಿಳಂಬ ಆಗದಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದರು.
ಈ ಯೋಜನೆಗಳ ಅನುಷ್ಠಾನದಿಂದ ಬೆಳಗಾವಿ ಜಿಲ್ಲೆಯನ್ನು ಟ್ಯಾಂಕರ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕಾರಿಯಾಗುವುದಲ್ಲದೇ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಅಥಣಿ, ರಾಯಬಾಗ, ಚಿಕ್ಕೋಡಿ ತಾಲೂಕುಗಳಿಗೆ ಅನುಕೂಲವಾಗಲಿದೆ. ಈ ಯೋಜನೆಗಳ ನಕ್ಷೆ ಮತ್ತು ವಿನ್ಯಾಸಗಳ ಅನುಮೋದನೆ ಆದ್ಯತೆಯ ಮೇಲೆ ನೀಡುವಂತೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಅವರು, ಸಂಬಂಧಿಸಿದ ಪಿ.ಎಂ.ಯು/ಪಿ.ಎಂ.ಸಿ ಹಾಗೂ ಗುತ್ತಿಗೆದಾರರಿಗೆ ಕಾಲಬದ್ಧ ಅನುಮೋದನೆ ಪಡೆಯಲು ಸೂಚಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಇಂಜನೀಯರ ಎಜಾಜ್ ಹುಸೇನ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಳಗಾವಿ, ಚಿಕ್ಕೋಡಿ ವಿಭಾಗದ ಅಧಿಕಾರಿಗಳು, ಗುತ್ತಿಗೆದಾರರು ಮತ್ತು ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.