ಬೆಂಗಳೂರು: ರಾಜ್ಯದಲ್ಲಿ ಶೇಕಡ 60ರಷ್ಟು ಕನ್ನಡ ನಾಮಫಲಕ ಹಾಕಲೇಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ.
ವಾಣಿಜ್ಯ ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಬಿಬಿಎಂಪಿ ಹೊರಡಿಸಿದ ಸುತ್ತೋಲೆಯನ್ನು ಪ್ರಶ್ನಿಸಿ ಪ್ರತಿಷ್ಠಿತ ವಾಣಿಜ್ಯ ಸಂಸ್ಥೆಗಳು ಸಲ್ಲಿಸಿದ ಅರ್ಜಿಯನ್ನು ತುರ್ತು ವಿಚಾರಣೆಗೆ ನಿಗದಿಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಲೇಬೇಕು ಎಂದು ಅರ್ಜಿದಾರ ಸಂಸ್ಥೆಗಳ ಪರ ವಕೀಲರಿಗೆ ಮೌಖಿಕವಾಗಿ ತಿಳಿಸಲಾಗಿದೆ.
ಆದಿತ್ಯ ಬಿರ್ಲಾ ಲಿಮಿಟೆಡ್, ಟೈಟಾನ್ ಕಂಪನಿ, ಆಡಿಡಾಸ್ ಇಂಡಿಯಾ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ 24 ಪ್ರತಿಷ್ಠಿತ ಖಾಸಗಿ ಸಂಸ್ಥೆಗಳು ಈ ಸಂಬಂಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿವೆ. ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಪೀಠದ ಮುಂದೆ ತುರ್ತು ವಿಚಾರಣೆಗೆ ನಿಗದಿಪಡಿಸುವಂತೆ ಅರ್ಜಿದಾರ ಸಂಸ್ಥೆಗಳ ಪರ ವಕೀಲರು ಮನವಿ ಮಾಡಿದ್ದಾರೆ.
ಅವರ ಮನವಿಯನ್ನು ತಳ್ಳಿ ಹಾಕಿದ ನ್ಯಾಯಮೂರ್ತಿಗಳು, ಕರ್ನಾಟಕದಲ್ಲಿ ವಹಿವಾಟು ನಡೆಸುತ್ತೀದ್ದೀರಿ ಎಂದಾದ ಮೇಲೆ ನಿಮ್ಮ ಸೂಚನಾ ಫಲಕಗಳನ್ನು ಕನ್ನಡದಲ್ಲಿ ಪ್ರದರ್ಶಿಸಬೇಕು. ಇದಕ್ಕೆ ಯಾವುದೇ ವಿನಾಯಿತಿ ನೀಡಲಾಗದು ಎಂದು ಹೇಳಿದ್ದಾರೆ. ಅರ್ಜಿದಾರರ ವಿರುದ್ಧದ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸಿದ್ದು, ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿದ್ದಾರೆ.