ಬೆಳಗಾವಿ : ಬೆಳಗಾವಿಯ ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ವಿಷಯ ಬೆಳಗಾವಿ ಜಿಲ್ಲೆಯಲ್ಲಿ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಕೊನೆಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಜ.21 ರ ನಂತರ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ವಿಷಯವಾಗಿ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ ಅವರ ಜೊತೆ ಮಾತನಾಡಲಾಗಿದೆ ಎಂದು ವಿವರಿಸಿದರು. ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ ಮತ್ತು ಧಾರವಾಡದ ಕೈಗಾರಿಕೆಗಳಿಗೆ ನೀರು ಕೊಡುವ ವಿಷಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗೊತ್ತಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಲ್ಲ ವಿಷಯಗಳು ಸಚಿವರಿಗೆ ಗೊತ್ತಿರುವುದಿಲ್ಲ. ಬೇರೆ ಬೇರೆ ಇಲಾಖೆಯವರು ತೀರ್ಮಾನ ಕೈಗೊಂಡಿರುತ್ತಾರೆ. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಮಾಹಿತಿ ಗೊತ್ತಾಗುತ್ತದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಕೇಳಿದ ತಕ್ಷಣ ನೀರು ಸರಬರಾಜು ಮಾಡಲು ಆಗುವುದಿಲ್ಲ. ಇದಕ್ಕೆ ಕೆಲ ನಿಯಮಗಳಿವೆ. ಯಾರು ಇಲ್ಲ ಸಲ್ಲದ ಮಾತು ಕೇಳಬೇಡಿ ಎಂದು ಅವರು ಹೇಳಿದರು.
ಯಾವುದೇ ಕೈಗಾರಿಕಾ ಪ್ರದೇಶಕ್ಕೆ ನೀರು ಕೊಡಲು ಸರಕಾರದಿಂದ ಅನುಮತಿ ಅಗತ್ಯ. ಒಂದು ವೇಳೆ ನೀರು ಕೊಡುವುದಾದರೆ ಈಗಿನ ದರ ಪರಿಷ್ಕರಣೆ ಮಾಡಲಾಗಿದೆ. ನೀರಿನ ಬಳಕೆ ವಿಚಾರವಾಗಿ ಮಹಾರಾಷ್ಟ್ರ ಮತ್ತು ಪಂಜಾಬ್ ಮಾದರಿಯಲ್ಲಿ ಕೇಂದ್ರ ಸರಕಾರ ನಿಯಮ ರೂಪಿಸಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸುವುದಾಗಿ ಅವರು ತಿಳಿಸಿದರು.