ಬೆಂಗಳೂರು: ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 450 ರೂ.ಗಳ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ, ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ.
ರಾಜ್ಯ ಸರ್ಕಾರದ ವತಿಯಿಂದ ತೊಗರಿ ಪ್ರತಿ ಕ್ವಿಂಟಾಲ್ಗೆ 450 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಪ್ರತಿ ಕ್ವಿಂಟಾಲ್ ತೊಗರಿಗೆ ರೂ.7,550 ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ. ಈಗಾಗಲೇ ಆರ್ಥಿಕ ಇಲಾಖೆಯ ಅನುಮೋದನೆ ಕೂಡ ದೊರೆತಿದ್ದು ನಾಡಿನ ತೊಗರಿ ಬೆಳೆಗಾರರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿ, 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್ಗೆ 7,550 ರೂ.ಗಳ ಜತೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್ಗೆ 450 ರೂ.ಗಳ ಪ್ರೋತ್ಸಾಹಧನವನ್ನು ನೀಡಲು ಹಾಗೂ ಇದಕ್ಕಾಗಿ ಅವಶ್ಯವಿರುವ ಅನುದಾನವನ್ನು ಆವರ್ತ ನಿಧಿಯಲ್ಲಿ ಲಭ್ಯವಿರುವ ಮೊತ್ತದಿಂದ ಭರಿಸಲು ಆರ್ಥಿಕ ಇಲಾಖೆಯು ಸಹಮತಿಸಿದೆ ಎಂದು ಎಚ್. ಆರ್. ಲಲಿತ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ 450 ರೂ. ಸೇರಿ ಪ್ರತಿ ಕ್ವಿಂಟಾಲ್ಗೆ ಒಟ್ಟು 8,000 ರೂ. ನೀಡುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಜನವರಿಯಲ್ಲಿ ಭರವಸೆ ನೀಡಿದ್ದರು.