ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಗಾಳಿ-ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಸೋಮವಾರದಿಂದ ನಾಲ್ಕು ದಿನಗಳು ಬಹುತೇಕ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್ ಘೋಷಿಸಿದೆ.
ಕರಾವಳಿಯ ದಕ್ಷಿಣ ಕನ್ನಡದ ಕೆಲವೆಡೆ ಸೋಮವಾರ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.
ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಜಿಲ್ಲೆಯ ಕೆಲವೆಡೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಜೊತೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಸೋಮವಾರ 19 ಜಿಲ್ಲೆಗಳಿಗೆ, ಮಂಗಳವಾರ 26 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬುಧವಾರ ಹಾಗೂ ಗುರುವಾರ 25 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಹಾಗೂ ಚಿತ್ರದುರ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಮುನ್ನೆಚ್ಚರಿಕೆಯಾಗಿ ಮಳೆ ವೇಳೆ ಅನಗತ್ಯ ಪ್ರಯಾಣ ತಪ್ಪಿಸಿ, ಸುರಕ್ಷಿತ ಸ್ಥಳದಲ್ಲಿ ಇರುವಂತೆ ಇಲಾಖೆ ಸಲಹೆ ನೀಡಿದೆ.
ಕರಾವಳಿ, ಉತ್ತರ ಒಳನಾಡಿನ ಕೆಲವೆಡೆ ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 1ರಿಂದ 3 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಳವಾಗಿತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (42 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.