ಬೆಳಗಾವಿ/ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’, ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳು ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 20ರಿಂದ 22ರವರೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮುಂದಿನ ಮೂರು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಒಂದು ವಾರ ಮಳೆ ಮುಂದುವರಿಯಲಿದ್ದು, 23ರಿಂದ ಗಾಳಿಯ ವೇಗ ಕೊಂಚ ಕಡಿಮೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.