ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಮತ್ತೆ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಸಭೆ ನಡೆಸಿದರು.
ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಅವರು ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಮಸ್ಯೆ ಆಗಬಾರದು. ಕೋವಿಡ್ ಸಹಾಯವಾಣಿ ತೆರೆಯಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜ್ವರ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸೌಲಭ್ಯ ಹಾಗೂ ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಆತಂಕ ಪಡುವ ಪರಿಸ್ಥಿತಿ ಇಲ್ಲದಿದ್ದರೂ ವೆಂಟಿಲೇಟರ್, ಆಮ್ಲಜನಕ, ಅಗತ್ಯ ಔಷಧ ಸೇರಿದಂತೆ ಅಗತ್ಯವಾದವುಗಳನ್ನು ಸಿದ್ದಪಡಿಸಿ ಇಟ್ಟುಕೊಳ್ಳಲು ಸೂಚನೆ ನೀಡಿದ್ದಾರೆ.
ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸಲು ಅರಿವು ಮೂಡಿಸಬೇಕು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಒಳ್ಳೆಯದು. ಶಾಲೆಗಳು ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ಮನೆಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರಮುಖ ಸುದ್ದಿ :- ಜೂನ್ 1ರಿಂದ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ; ಪ್ರವೇಶ ಶುಲ್ಕ ನಿಗದಿ
ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಅವಲೋಕನೆ ಮಾಡಬೇಕು. ನಿರಂತರವಾಗಿ ತೀವ್ರ ನಿಗಾ ಇಡಬೇಕು.ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದರ ಬದಲು ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು. ಕೊರೋನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮೇ ತಿಂಗಳ ನಾಲ್ಕನೇ ವಾರದಲ್ಲಿ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎಂದು ಹೇಳುವ ಒಂದು ಪ್ರಕರಣ ಮಾತ್ರ ಇದೆ. ಎಸ್ಎಆರ್ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.