ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಈ ಜಿಲ್ಲೆಗಳಿಗೂ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ.
ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಕೋಲಾರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರದಿಂದ ರಾಜ್ಯದ ವಿವಿಧೆಡೆ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.