ಬೆಂಗಳೂರು: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿ ಸುದ್ದಿ ನೀಡಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಹಣ ಬಿಡುಗಡೆ ಮಾಡಲು ಬೇಡಿಕೆ ಪತ್ರದೊಂದಿಗೆ ಕಾಮಗಾರಿ ವಿವರ ನೀಡುವಂತೆ ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ತಿಳಿಸಿದ್ದಾರೆ.
ಗ್ಯಾರಂಟಿಗಳಿಗೆ ಹಣಕಾಸಿನ ಹೊರೆ ಕಾರಣಕ್ಕೆ ಅಭಿವೃದ್ಧಿ ಅನುದಾನದ ವಿಚಾರದಲ್ಲಿ ಸಹಕಾರ ನೀಡಬೇಕೆಂದು ಮುಖ್ಯಮಂತ್ರಿಯವರು ಸರ್ಕಾರ ರಚನೆಯಾದ ಶುರುವಿನಲ್ಲಿ ಮನವಿ ಮಾಡಿದ್ದರು. ಆದರೆ, ಸರ್ಕಾರ ರಚನೆಯಾಗಿ ಎರಡು ವರ್ಷಕಳೆಯುತ್ತ ಬಂದರೂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ನ ಹಿರಿಯ ಶಾಸಕರು ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದು ಸರ್ಕಾರದ ಮುಜುಗರಕ್ಕೂ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಪತ್ರ ಬರೆದು ತಿಳಿಸಿದ್ದಾರೆ.
ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ, ಪಕ್ಷದ ಸುಮಾರು 103 ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದರು. ಈ ಸಂದರ್ಭದಲ್ಲಿ ಬಹುತೇಕ ಶಾಸಕರು, ಅನುದಾನವಿಲ್ಲದೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಜನರ ಅಸಮಾಧಾನ ಎದುರಿಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡಿದ್ದರು. ಶಾಸಕರ ಈ ದೂರನ್ನು ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಗಮನಕ್ಕೆ ತಂದಿದ್ದರು.
ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗುವ ಒಟ್ಟು 50 ಕೋಟಿ ರೂ.ಗಳ ಪೈಕಿ 37.50 ಕೋಟಿ ರೂ.ಗಳನ್ನು ಲೋಕೋಪಯೋಗಿ ಇಲಾಖೆ, ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ವೆಚ್ಚ ಮಾಡುವುದು ಕಡ್ಡಾಯವಾಗಿದೆ. ಉಳಿದ 12.50 ಕೋಟಿ ರೂ.ಗಳ (ಶೇ.25) ಅನುದಾನವನ್ನು ಶಾಸಕರು ತಮ್ಮ ವಿವೇಚನಾಧಿಕಾರ ಬಳಸಿ ಕಾಮಗಾರಿಗಳಿಗೆ ವೆಚ್ಚ ಮಾಡಬಹುದಾಗಿದೆ ಎಂದು ಸಿದ್ದರಾಮಯ್ಯ ಶಾಸಕರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಜುಲೈ 30- 31ರಂದು ಸಭೆ
ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಅದರ ಭಾಗವಾಗಿ ಜುಲೈ 30 ಮತ್ತು 31ರಂದು ಎರಡು ದಿನಗಳ ಕಾಲ ಜಿಲ್ಲಾವಾರು ಪಕ್ಷದ ಶಾಸಕರ ಸಭೆ ಕರೆದಿದ್ದಾರೆ.
ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಶಾಸಕರ ಅಹವಾಲುಗಳನ್ನು ಸಿಎಂ ಖುದ್ದು ಆಲಿಸಲಿದ್ದಾರೆ. ವಿಶೇಷ ಅನುದಾನ ಬಿಡುಗಡೆ ಜತೆಗೆ ಅಹವಾಲು ಆಲಿಸುವುದರಿಂದ ಪಕ್ಷದ ಶಾಸಕರನ್ನು ಪೂರ್ಣ ಪ್ರಮಾಣದಲ್ಲಿವಿಶ್ವಾಸಕ್ಕೆ ತೆಗೆದುಕೊಳ್ಳಬಹುದು ಎಂಬ ಲೆಕ್ಕಾಚಾರವಿದೆ. ಜಿಲ್ಲಾವಾರು ನಡೆಯಲಿರುವ ಈ ಸಭೆಗೆ ಬರುವಾಗ ವಿಶೇಷ ಅನುದಾನಕ್ಕೆ ಸಂಬಂಧಿಸಿದಂತೆ ಬೇಡಿಕೆ ಪತ್ರದೊಂದಿಗೆ ನಿಗದಿತ ನಮೂನೆಯಲ್ಲಿ ಕಾಮಗಾರಿಗಳ ವಿವರಗಳನ್ನು ಪಟ್ಟಿ ಮಾಡಿಕೊಂಡು ಬರುವಂತೆ ಸೂಚಿಸಲಾಗಿದೆ. ಪಕ್ಷದ ಶಾಸಕರಿಗೆ ಬರೆದಿರುವ ಪತ್ರದಲ್ಲೇ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.