ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಕುರಿತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿರುವರು.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ತಾನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬರು ಈಚೆಗೆ ನ್ಯಾಯಾಲಯದಲ್ಲಿ ಹೇಳಿಕೆ ಕೊಟ್ಟಿದ್ದರು. ಎರಡು ದಶಕಗಳಲ್ಲಿ ಅತ್ಯಾಚಾರ, ಹತ್ಯೆ ಮತ್ತು ದೌರ್ಜನ್ಯಗಳು ಈ ಭಾಗದಲ್ಲಿ ನಡೆದಿವೆ ಎಂದು ಅವರು ಹೇಳಿದ್ದರು. ಇದರ ನಂತರ ಭಾರತೀಯ ನ್ಯಾಯ ಸಂಹಿತದ ಕಲಂ 211 (ಎ) ಅಡಿಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವ್ಯಕ್ತಿಯ ಹೇಳಿಕೆಯ ಆಧಾರದಲ್ಲಿ ಸಮಗ್ರ ತನಿಖೆ ನಡೆಯಬೇಕು ಎಂದು ವಿವಿಧ ಕಡೆಗಳಿಂದ ರಾಜ್ಯ ಸರ್ಕಾರದ ಮೇಲೆ ಒತ್ತಾಯ ಬಂದಿತ್ತು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಕೂಡ ಸರ್ಕಾರಕ್ಕೆ ಪತ್ರ ಬರೆದಿದ್ದರು. ಸಮಗ್ರ ತನಿಖೆ ನಡೆಸಲು ಸರ್ಕಾರ ಸಿದ್ದ ಎಂದು ಗೃಹ ಸಚಿವ ಜಿ.ಪರಮೇಶ್ವರ ಶನಿವಾರ ಹೇಳಿಕೆ ನೀಡಿದ್ದರು.
ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣ ಮತ್ತು ರಾಜ್ಯದ ಇತರ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಬಗ್ಗೆ ವಿಶೇಷ ತಂಡ ಗಮನ ಹರಿಸಿ ತನಿಖೆ ಕೈಗೊಳ್ಳಲಿದೆ. ತನಿಖೆಯ ವರದಿಯನ್ನು ಆದಷ್ಟು ಬೇಗ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಪ್ರಕರಣವನ್ನು ಶೀಘ್ರದಲ್ಲೇ ತನಿಖಾ ತಂಡಕ್ಕೆ ವರ್ಗಾಯಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.