ಬೆಳಗಾವಿ: ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ ಬರುವ 43ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಕಡಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಇಲಾಖೆಯಿಂದ ವಂದೇ ಭಾರತ್ ರೈಲು ಹೊರತು ಪಡಿಸಿ ಈ ಭಾಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲುಗಳು ಸೇರಿದಂತೆ ಎಲ್ಲ ಎಕ್ಸ್ ಪ್ರೆಸ್ ರೈಲುಗಳನ್ನು ಕುಡಚಿ ಮತ್ತು ಉಗಾರಖುರ್ದ್ ರೈಲು ನಿಲ್ದಾಣದಲ್ಲಿ ಎರಡು ನಿಮಿಷದ ತಾತ್ಕಾಲಿಕ ನಿಲುಗಡೆಗೆ ನನ್ನ ಮನವಿ ಮೇರೆಗೆ ಆದೇಶಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಗುರುವಾರ ಆ-21 ರಂದು ನವದೆಹಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ನದಿಯಿಂದ 2.16 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾ ನದಿಯಿಂದ 57 ಸಾವಿರ ಕ್ಯೂಸೆಕ್ಕಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಪರಿಣಾಮವಾಗಿ ಸಂಪರ್ಕ ಸೇತುವೆ ಜಲಾವೃತಗೊಂಡು ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದೆ. ಕುಡಚಿ–ಉಗಾರಖುರ್ದ್ ನಡುವಿನ ಬೃಹತ್ ಕುಡಚಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು. ಈ ಮಾರ್ಗವು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ದಾರಿ ಆಗಿದ್ದು, ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ಭಾಗದಲ್ಲಿವ್ಯವಸ್ಥಾಪಕರಿಗೆ ರೈಲು ನಿಲುಗಡೆ ಮಾಡಲು ನೈರುತ್ಯ ರೈಲ್ವೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಮನವಿ ಮಾಡಲಾಗಿತ್ತು. ಹೀಗಾಗಿ, ವಿಭಾಗೀಯ ರೈಲ್ವೆ ವ್ಯವಸ್ಥಾಪಕÀÀರು ಎರಡು ನಿಮಿಷದ ತಾತ್ಕಾಲಿಕ ನಿಲುಗಡೆಗೆ ಅನಿರ್ದಿಷ್ಟ ಅವಧಿಯವರೆಗೆ ಆದೇಶ ಹೊರಡಿಸಿದ್ದಾರೆ. ರೈಲು ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ನಿಲುಗಡೆಗೆ ವ್ಯವಸ್ಥೆ ಮಾಡಿದ ನೈರುತ್ಯ ರೈಲ್ವೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.