ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್.ವೈ ಮೇಟಿ ಅವರು ಮಂಗಳವಾರ ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಎಚ್.ವೈ ಮೇಟಿ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಬಾಗಲೋಕಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದ ಅವರು, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು. 2008ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಇವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈ ಹಿಂದೆ 2013ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್.ವೈ ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಎಚ್.ವೈ ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.


