ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಕನಿಷ್ಠ ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮಾನ್ಯ ಸದಸ್ಯರು ಸದನದಲ್ಲಿ ಪ್ರಸ್ತಾಪಿಸಿರುವ ಅನೇಕ ಗಂಭೀರ ವಿಷಯಗಳಿಗೆ ಇನ್ನೂ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರಿಂದ ಸ್ಪಷ್ಟ ಉತ್ತರಗಳು ದೊರಕಬೇಕಿವೆ ಎಂದು ಆರ್.ಅಶೋಕ್ ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ, ಮೂಲಸೌಕರ್ಯ, ನೀರಾವರಿ, ಉದ್ಯೋಗ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ವ್ಯಾಪಕ ಚರ್ಚೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಇದರ ಜೊತೆಗೆ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕುಸಿದಿರುವ ಕಾನೂನು ಮತ್ತು ಸುವ್ಯವಸ್ಥೆ, ವಿವಿಧ ಇಲಾಖೆಗಳ ಅನುದಾನ ಬಳಕೆಯಲ್ಲಿ ಕಾಣಿಸುತ್ತಿರುವ ಕಳಪೆ ಸಾಧನೆ, ಆಡಳಿತಾತ್ಮಕ ವೈಫಲ್ಯಗಳು ಸೇರಿದಂತೆ ಹಲವಾರು ಮಹತ್ವದ ವಿಚಾರಗಳ ಕುರಿತು ಸದನದಲ್ಲಿ ಚರ್ಚಿಸಲು ಇನ್ನೂ ಸಮರ್ಪಕ ಸಮಯಾವಕಾಶ ದೊರೆತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸದನದ ಕಾರ್ಯಸೂಚಿಯಲ್ಲಿ ಸೇರಿರುವ ಅನೇಕ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿ ಸರ್ಕಾರದಿಂದ ಸ್ಪಷ್ಟ ಉತ್ತರ ಪಡೆಯುವುದು ಶಾಸಕರ ಕರ್ತವ್ಯವಾಗಿದ್ದು, ಅದಕ್ಕಾಗಿ ಅಧಿವೇಶನ ಅವಧಿಯನ್ನು ವಿಸ್ತರಿಸುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ತಮ್ಮ ಮನವಿಯನ್ನು ಪರಿಗಣಿಸಿ, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸುವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವನ್ನು ಆರ್.ಅಶೋಕ್ ವ್ಯಕ್ತಪಡಿಸಿದ್ದಾರೆ.


