ಬೆಳಗಾವಿ: ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಜ.2) ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.
ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ 9 ಗಂಟೆಯ ಒಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ತಿಳಿಸಿದರು.
ವಿಜೃಂಭಣೆಯ ಗಣರಾಜ್ಯೋತ್ಸವ ದಿನಾಚರಣೆಗಾಗಿ ನಗರದ ಎಲ್ಲ ಶಾಲಾ,ಕಾಲೇಜು, ವಸತಿ ನಿಲಯದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯವಾಗಿ ಕರೆತರುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ದಿನದಂದು ಜರುಗಲಿರುವ ಪಥ ಸಂಚಲನ, ಧ್ವಜಾರೋಹಣ, ವೇದಿಕೆ ಸಿದ್ದತೆ ಸೇರಿದಂತೆ ಅಗತ್ಯ ಎಲ್ಲ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖೆಗಳು ಸಮನ್ವಯದೊಂದಿಗೆ ಸಮರ್ಪಕವಾಗಿ ನಿರ್ವಹಿಸಬೇಕು.
ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದನ್ವಯ ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸುವಂತೆ ತಿಳಿಸಿದರು.
ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಹಾಗೂ ಕಾರ್ಯಕ್ರಮ ದಿನದಂದು ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಸಿಬ್ಬಂದಿಗಳ ನಿಯೋಜನೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲು ತಿಳಿಸಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ, ಸ್ಥಳಿಯ ಸಂಸ್ಥೆಗಳಲ್ಲಿ ಶಿಷ್ಟಾಚಾರದನ್ವಯ ಧ್ವಜಾರೋಹಣ ನೆರವೇರಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ಸಾಧಕರನ್ನು ಸನ್ಮಾನಿಸುವ ಕುರಿತು ಚರ್ಚಿಸಲಾಯಿತು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಮ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ,
ಪರೀಕ್ಷಾರ್ಥಿ ಐ.ಪಿ.ಎಸ್.ಅಧಿಕಾರಿ ಡಾ
ಭಾನುಪ್ರಕಾಶ ಜೆ.,ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೆಶಕ ಮಲ್ಲಿಕಾರ್ಜುನ ನಾಯಕ, ಕ್ರೀಡಾ ಇಲಾಖೆ ಉಪನಿರ್ದೆಶಕ ಬಿ.ಶ್ರೀನಿವಾಸ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ, ಗಣ್ಯರಾದ ಮಲ್ಲೇಶ ಚೌಗಲೆ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


