ಬೆಂಗಳೂರು : ರಾಜ್ಯದ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ಮಹತ್ವದ ತೀರ್ಮಾನ ಕೈಗೊಂಡಿದೆ.
ಈ ವಯೋಮಿತಿ ಸಡಿಲಿಕೆಯು ಡಿಸೆಂಬರ್ 31, 2027 ರವರೆಗೆ ಅನ್ವಯವಾಗಲಿದೆ. ಈ ವಯೋಮಿತಿ ಸಡಿಲಿಕೆಯು ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ ಅನ್ವಯಿಸುತ್ತದೆ.
ಈವರೆಗೆ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇದ್ದರೆ, SC, ST ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿತ್ತು. ಆದರೀಗ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಆಗಲಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.
ನೇಮಕಾತಿ ವಿಳಂಬದಿಂದ ಉಂಟಾದ ನಷ್ಟವನ್ನು ಸರಿದೂಗಿಸಲು 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕೆಂದು ಹಲವಾರು ಜನಪ್ರತಿನಿಧಿಗಳು ಮತ್ತು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದವು. ಈ ಹಿಂದೆ ಸೆಪ್ಟೆಂಬರ್ನಲ್ಲಿ ಸರ್ಕಾರ ಮೂರು ವರ್ಷಗಳ ಸಡಿಲಿಕೆ ಘೋಷಿಸಿತ್ತಾದರೂ, ಈಗ ಅದನ್ನು ಐದು ವರ್ಷಕ್ಕೆ ಹೆಚ್ಚಿಸಲಾಗಿದೆ.
ಇದಲ್ಲದೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ.
22 ಹಿಂದುಳಿದ, ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ.


