ಬೆಳಗಾವಿ:2023ರ ಮುಂಗಾರು ಹಂಗಾಮಿನ ಬರ ಪರಿಹಾರ ವಿತರಣೆಯಲ್ಲಿ ಮೂಡಲಗಿ ತಾಲೂಕಿನ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಗಂಭೀರ ಅಕ್ರಮ ಎಸಗಿರುವುದು ಮಾಹಿತಿ ಹಕ್ಕಿನಡಿ ಬೆಳಕಿಗೆ ಬಂದಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಯಮಾನುಸಾರ ಸಮೀಕ್ಷೆ ನಡೆಸದೇ ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಪಟ್ಟಿಯಲ್ಲೇ ಇಲ್ಲದ 25 ಗ್ರಾಮಗಳ 368 ಅನರ್ಹ ವ್ಯಕ್ತಿಗಳ ಖಾತೆಗಳಿಗೆ ಅಕ್ರಮವಾಗಿ ಒಟ್ಟು ರೂ.1,13,00,759 ಮೊತ್ತವನ್ನು ಜಮೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಅಕ್ರಮದಿಂದ ಅರ್ಹ ರೈತರಿಗೆ ತಲುಪಬೇಕಿದ್ದ ಬರ ಪರಿಹಾರ ಹಣವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ಒಂದು ಕೋಟಿಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅವರು ಆರೋಪಿಸಿದರು. ಈ ಭ್ರಷ್ಟಾಚಾರದ ಕುರಿತು ತಹಶೀಲ್ದಾರರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ 19 ತಿಂಗಳು ಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು.ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಕರ್ತವ್ಯಲೋಪ ಎಸಗಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜೊತೆಗೆ ಅನರ್ಹರಿಗೆ ಜಮೆ ಮಾಡಲಾದ ಹಣವನ್ನು ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿಗಳ ವೇತನದಿಂದಲೇ ವಸೂಲಿ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಒಂದು ವೇಳೆ ಸರ್ಕಾರ ತಕ್ಷಣ ಎಚ್ಚೆತ್ತು ಈ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳದೇ ಅರ್ಹ ರೈತರಿಗೆ ನ್ಯಾಯ ಒದಗಿಸದಿದ್ದರೆ, ನ್ಯಾಯಾಲಯದ ಮೊರೆ ಹೋಗಿ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಭೀಮಪ್ಪ ಗಡಾದ ಎಚ್ಚರಿಕೆ
ನೀಡಿದರು.


