ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ತಾಪಮಾನ ಹೆಚ್ಚಾಗಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಈ ನಡುವೆ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ಕೊಡಗು, ಬೀದರ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವಡೆ ಭಾನುವಾರ ಕೆಲ ಹೊತ್ತು ಗುಡುಗು ಸಹಿತ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಪಾಳಾದಲ್ಲಿ ಗಾಳಿಮಳೆಗೆ ಬೃಹತ್ ಮರವೊಂದು ಬಿದ್ದು ಸಂಚಾರಕ್ಕೆ ಕೆಲಕಾಲ ತೊಂದರೆಯಾಗಿತ್ತು. ಧಾರವಾಡ ಹಾಗೂ ಇತರ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಧಾರವಾಡ ಜಿಲ್ಲೆಯಲ್ಲಿ 3 ಸೆಂಟಿಮೀಟರ್ ಮಳೆಯಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 1 ಸೆಂಟಿಮೀಟರ್ ಮಳೆ ವರದಿಯಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆದರೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಶುಷ್ಕ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ ಎಂದು ಅದು ಹೇಳಿದೆ.
ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಬಳ್ಳಾರಿ ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಅದು ತಿಳಿಸಿದೆ.
ಹೀಟ್ ಸ್ಟ್ರೋಕ್ ಬಗ್ಗೆ ಎಚ್ಚರಿಕೆ
ಮಾರ್ಚ್ ತಿಂಗಳ ಎರಡನೇ ವಾರದ ನಂತರ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಹೀಗಾಗಿ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆ ವರೆಗಿನ ಸಮಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಹೆಚ್ಚಾಗಬಹುದು.ಹೀಗಾಗಿ ಮನೆಯಿಂದ ಹೊರಗೆ ಬರುವುದನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ಸೂಚಿಸಲಾಗಿದೆ.


