ಧಾರವಾಡ :
ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ.
ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜನವರಿ 12ರ ಗುರುವಾರ ಮಾತ್ರ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿಲ್ಲ, ಎಂದಿನಂತೆ ಪಿಯುಸಿ ಮತ್ತು ಪದವಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ