ಬೆಂಗಳೂರು:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಾಳೆ, ಗುರುವಾರ(ಮಾರ್ಚ್ 9)ದಿಂದ ಆರಂಭವಾಗಲಿದ್ದು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ 9- 29 ರವರೆಗೆ ದ್ವಿತೀಯ ಪರೀಕ್ಷೆಗಳು ನಡೆಯಲಿವೆ.
ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗುಸಿಬ್ಬಂದಿ ಮೊಬೈಲ್ ಫೋನ್/ಇತರೆ ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ.
ಕೊಠಡಿ ಒಳಗೆ ಯಾರೂ ವಿದ್ಯುನ್ಮಾನ ಉಪಕರಣಗಳನ್ನು ತಗೆದುಕೊಂಡು ಹೋಗುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರ ಆವರಣದಲ್ಲಿ ಪರೀಕ್ಷೆ ಕಾರ್ಯಕ್ಕೆ ಸಂಬಂಧಿಸದೇ ಇರುವ ವ್ಯಕ್ತಿಗಳ ಪ್ರವೇಶಕ್ಕೆ ನಿಷೇಧವಿದೆ. ಹಿಂದೆ ನಕಲು ಮಾಡಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಕಣ್ಗಾವಲು ಇರಿಸಲಾಗಿದೆ.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಬಸ್ ಸೌಲಭ್ಯವನ್ನು ಪಡೆಯಬಹುದಾಗಿದೆ.
* ಹಿಂದೆ ನಕಲು ಮಾಡಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಕಣ್ಗಾವಲು
* ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ಫೋನ್, ಸ್ಮಾರ್ಟ್ವಾಚ್, ಇಯರ್ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳ ನಿಷೇಧ
* ವಿದ್ಯಾರ್ಥಿಗಳಿಗೆ ಸಮಯ ನೋಡಲು ಗೋಡೆ ಗಡಿಯಾರದ ವ್ಯವಸ್ಥೆ
* ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಲ್ಲಿ 24/7 ಪೊಲೀಸ್ ಭದ್ರತೆ
* ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧ, ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ಮಾತ್ರ ಕ್ಯಾಮೆರಾ ಸೌಲಭ್ಯ ಇಲ್ಲದ ಬೆಸಿಕ್ ಮೊಬೈಲ್ಫೋನ್ ಬಳಕೆಗೆ ಅನುಮತಿ.
* ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
* ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ಬಂದ್
* ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಕಂಪ್ಯೂಟರ್, ಗೇಮ್ಸ್ ಕೇಂದ್ರಗಳ ಮೇಲೆ ವಿಶೇಷ ನಿಗಾ