ಜನ ಜೀವಾಳ ಜಾಲ : ಬೆಳಗಾವಿ :ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಹಿನ್ನಡೆ ಉಂಟಾಗಿರುವ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಇದೀಗ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಜೊತೆಗೆ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿ ಪಕ್ಷೇತರರಾಗಿ ಕಣಕ್ಕಿಳಿಯುತ್ತಿದ್ದಾರೆ ಎಂದು ಖಚಿತ ಮೂಲಗಳು ತಿಳಿಸಿವೆ.
ಮಂಗಳವಾರ ರಾತ್ರಿ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಣ ಸವದಿ ಅವರು ಈ ಬೆಳವಣಿಗೆಯಿಂದ ತೀವ್ರವಾಗಿ ನೊಂದಿದ್ದು ಇದೀಗ ಬಿಜೆಪಿ ಮತ್ತು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ತಮಗಿರುವ ಶಕ್ತಿ ತೋರಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದು ಮೂಲದ ಪ್ರಕಾರ ಅವರ ಪುತ್ರ ಚಿದಾನಂದ ಸವದಿ ಅವರು ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿವೆ. ಒಟ್ಟಾರೆ, ಅಥಣಿ ವಿಧಾನ ಸಭಾ ಮತಕ್ಷೇತ್ರದಲ್ಲಿ ಈ ಬಾರಿ ಲಕ್ಷ್ಮಣ ಸವದಿ ಅವರಿಗೆ ಬಿಜೆಪಿ ಟಿಕೆಟ್ ನೀಡದೇ ಇರುವುದರಿಂದ ಅವರ ಅಭಿಮಾನಿಗಳಿಗೆ ಭಾರಿ ನಿರಾಶೆಯಾಗಿದ್ದು ಗುರುವಾರ
ನಡೆಯಲಿರುವ ಅಭಿಮಾನಿಗಳ ಸಭೆಯಲ್ಲಿ ಲಕ್ಷ್ಮಣ ಸವದಿ ಅವರ ರಾಜಕೀಯ ಭವಿಷ್ಯ ಬಹುತೇಕ ನಿರ್ಧಾರವಾಗುವ ಸಾಧ್ಯತೆ ಇದೆ.