ಬೆಂಗಳೂರು:ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಅವರ ನಂತರ ಇನ್ನು ಅನೇಕ ನಾಯಕರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರ ನಿವಾಸದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಲಕ್ಷ್ಮಣ ಸವದಿ ಅವರ ಜತೆ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತನಾಡಿದರು.
‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ.
ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಅವರು ತಿಳಿಸಿದರು.