ಬೆಳಗಾವಿ:
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ದತೆ ನಡೆಸಿದ್ದು, ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬೆಂಗಳೂರಿನ ಗೃಹ ಕಚೇರಿಯಲ್ಲಿ ಮಂಗಳವಾರ ರಾತ್ರಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಸಭೆ ನಡೆಸಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಸದಸ್ಯರು, ಶಾಸಕರು, ಮಾಜಿ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಬೆಳಗಾವಿ- ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎರಡೂ ಕ್ಷೇತ್ರಗಳ ಆಕಾಂಕ್ಷಿಗಳು ಇದ್ದರು.
ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆದಿದ್ದು, ಎಲ್ಲ ನಾಯಕರ ಅಭಿಪ್ರಾಯವನ್ನು ಸಚಿವ ಸತೀಶ ಜಾರಕಿಹೊಳಿ ಆಲಿಸಿದ್ದು, ಸಭೆಯಲ್ಲಿದ್ದ ಹಲವು ನಾಯಕರು ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರದಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ಅನುಕೂಲ ಆಗಲಿದೆ ಎಂಬ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ.
ಸಚಿವ ಸತೀಶ ಜಾರಕಿಹೊಳಿ ಅವರು ಸಭೆಯಲ್ಲಿ ಮಾತನಾಡಿದ್ದು, ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ನಮ್ಮ ಆದ್ಯತೆ. ನಿಮ್ಮ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ಗಮನಕ್ಕೆ ತರಲಾಗುವುದು. ಹೈಕಮಾಂಡ್ ನಿರ್ಧಾರವೇ ಅಂತಿಮ ನಿರ್ಧಾರ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಕಾರ್ಯಕರ್ತರು ಒಗ್ಗಟ್ಟಾಗಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದ್ದಾರೆಂದು ತಿಳಿದು ಬಂದಿದೆ.
ಸಭೆಯಲ್ಲಿ ಚರ್ಚೆ ಮಾಡಿದ ಸಚಿವರು, ಶಾಸಕರು ಹಾಗೂ ನಾಯಕರು ಕೊನೆಗೆ ಇಬ್ಬರ ಹೆಸರನ್ನು ಅಂತಿಮಗೊಳಿಸಿದರು. ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಅಥವಾ ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ, ಕುರುಬ ಸಮಾಜದ ಮುಖಂಡ ಲಕ್ಷ್ಮಣರಾವ್ ಚಿಂಗಳೆ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಪಟ್ಟಿ ಕಳುಹಿಸಲು ನಿರ್ಧರಿಸಲಾಯಿತು. ಸ್ವತಃ ಪ್ರಿಯಾಂಕಾ ಹಾಗೂ ಚಿಂಗಳೆ ಕೂಡ ಈ ಸಭೆಯಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಚಿಕ್ಕೋಡಿಯಲ್ಲಿ ಗೆಲ್ಲಲೇಬೇಕಾದ ಅಭ್ಯರ್ಥಿಗೆ ಟಿಕೆಟ್ ನೀಡಬೇಕಿದೆ. ಅಭ್ಯರ್ಥಿ ಎಲ್ಲ ಸಮುದಾಯದವರೂ ಒಪ್ಪುವಂತೆ ಇರಬೇಕು, ಆರ್ಥಿಕವಾಗಿಯೂ ಪ್ರಬಲ ಆಗಿರಬೇಕು. ಶಾಸಕರಿಂದ ವಿರೋಧ ವ್ಯಕ್ತವಾಗದೇ ಇರುವಂತೆ ಇರಬಾರದೆಂದು ಚರ್ಚೆ ನಡೆಯಿತು. ಅರ್ಜಿ ಸಲ್ಲಿಸಿದ ಆರು ಹೆಸರಿನ ಬಗ್ಗೆಯೂ ಚರ್ಚೆ ನಡೆಯಿತು. ಆದರೆ, ಬಹಳಷ್ಟು ಜನ ಪ್ರಿಯಾಂಕಾ ಅಥವಾ ಚಿಂಗಳೆ ಅವರ ಹೆಸರಿಗೇ ಒಪ್ಪಿಗೆ ನೀಡಿದರು ಎಂದು ಮೂಲಗಳು ಖಚಿತಪಡಿಸಿವೆ.
ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ, ಶಾಸಕರಾದ ಲಕ್ಷ್ಮಣ ಸವದಿ, ವಿಶ್ವಾಸ ವೈದ್ಯ, ರಾಜು ಕಾಗೆ, ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳಕರ, ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಅರ್ಜುನ ನಾಯಕವಾಡಿ, ಮುಖಂಡರಾದ ಎಚ್.ಬಿ.ಘಾಟಗೆ, ಮಾರುತಿ ಮೋಹಿತೆ, ಪಕ್ಷದ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಭಾಗವಹಿಸಿದ್ದರು.