ಬೆಂಗಳೂರು:
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40ರಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಕರಾವಳಿ ತೀರದ ಜನರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯು 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಅದೇ ರೀತಿ, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.