ಬೆಳಗಾವಿ :
ಗುರುವಾರ ರಾತ್ರಿ ಇಲ್ಲಿನ ಮಾಧವ ರಸ್ತೆಯ ಆಸ್ಪತ್ರೆ ಮೇಲೆ ಬೆಳಗಾವಿ ಎಸಿ ಹಾಗೂ ಆರೋಗ್ಯ- ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ರೂಮನ್ನು ಸಹ ಸೀಜ್ ಮಾಡಿದ್ದಾರೆ.
ಗರ್ಭಿಣಿಯರ ಭ್ರೂಣ ಪತ್ತೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆ ಮೇಲೆ ದಾಳಿ ನಡೆದಿದೆ ಎಂದು ಖಚಿತ ಮೂಲಗಳು ದೃಢಪಡಿಸಿವೆ.
ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆಹಚ್ಚುವ ಯಂತ್ರಗಳ ಕಾಯ್ದೆ ಉಲ್ಲಂಘನೆಯಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡುತ್ತಿತ್ತು. ಭ್ರೂಣ ಲಿಂಗ ಪತ್ತೆ ಯಂತ್ರಗಳ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಸರ್ಕಾರದ ಹಲವು ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾದ ಹಿನ್ನೆಲೆ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ಒಂದು ವಾರದೊಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಎಚ್ಚರಿಸಲಾಗಿದೆ.
ಆಸ್ಪತ್ರೆಯಲ್ಲಿ ಗರ್ಭಿಣಿಯರನ್ನು ಸ್ಕ್ಯಾನಿಂಗ್ ಮಾಡುವ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೆಷಿನ್ ರೂಂ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ದಾಳಿಯಲ್ಲಿ ಬೆಳಗಾವಿ ಎಸಿ ಶ್ರವಣ ನಾಯ್ಕ, ಪ್ರೊಬೆಷನರಿ ಐಎಎಸ್ ಶುಭಂ ಶುಕ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿಶ್ವನಾಥ ಭೋವಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಂಜುನಾಥ ಬಿಸನಳ್ಳಿ, ಹಾಲಪ್ಪ ಒಡೆಯರ್ ಮತ್ತಿತರರು ಪಾಲ್ಗೊಂಡಿದ್ದರು.