ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರು ಶಾಸಕ ಕಾಂಗ್ರೆಸ್ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಮಂಗಳವಾರ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ಹೈಕೋರ್ಟ್ ನಿರ್ದೇಶಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ. ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸುವಂತೆ ಕೋರಿ 248 ಮತಗಳಿಂದ ಸೋತಿದ್ದ ಬಿಜೆಪಿಯ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ದೇವದಾಸ ಅವರಿದ್ದ ಏಕಸದಸ್ಯ ಪೀಠ ಪುರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡ ಪರ ವಕೀಲರು ಮಾಡಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಒಂದು ತಿಂಗಳ ಮಟ್ಟಿಗೆ ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.