ನವದೆಹಲಿ : ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸೋಮವಾರ ಪಕ್ಷದ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಭೂಪೇಂದರ ಯಾದವ್ ಅವರನ್ನು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಿಸಲಾಗಿದೆ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರು ರಾಜ್ಯಕ್ಕೆ ಸಹ-ಪ್ರಭಾರಿಯಾಗಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಹರಿಯಾಣದ ಬಿಜೆಪಿ ಚುನಾವಣಾ ಉಸ್ತುವಾರಿ ಮತ್ತು ತ್ರಿಪುರಾ ಮಾಜಿ ಮುಖ್ಯಮಂತ್ರಿ ಬಿಪ್ಲಬಕುಮಾರ ದೇಬ್ ಅವರನ್ನು ರಾಜ್ಯದ ಸಹ-ಪ್ರಭಾರಿಯಾಗಿ ಮಾಡಲಾಗಿದೆ ಎಂದು ಅದು ಹೇಳಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಶಿವರಾಜ ಸಿಂಗ್ ಚೌಹಾಣ ಜಾರ್ಖಂಡಕ್ಕೆ ಚುನಾವಣಾ ಉಸ್ತುವಾರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದು ಅದು ಹೇಳಿದೆ. ಈ ವರ್ಷದ ಕೊನೆಯಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ನೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.