ಬೆಳಗಾವಿ :
ಹಿಂದು ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ಬಿಜೆಪಿ ಬುಧವಾರ (ನವೆಂಬರ್ 9) ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ , ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರು ಸತೀಶ ಜಾರಕಿಹೊಳಿ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದರು.
ಸತೀಶ ಜಾರಕಿಹೊಳಿ ಅವರ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆಯಲ್ಲಿ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹಿಂದೂ ಶಬ್ದದ ಬಗ್ಗೆ ಭಾರತದ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಅದೊಂದು ಶ್ರೇಷ್ಠ ಜೀವನ ಪದ್ಧತಿ ಎಂದು ನಿರೂಪಿಸಿದೆ. ಜತೆಗೆ ಶ್ರೇಷ್ಠ ವಿದ್ವಾಂಸರು ಹಿಂದೂ ಧರ್ಮದ ಶ್ರೇಷ್ಠತೆಯನ್ನು ಎತ್ತಿ ಹಿಡಿದಿದ್ದಾರೆ. ಆದರೆ, ಇದೀಗ ಸತೀಶ ಜಾರಕಿಹೊಳಿಯವರು ನೀಡಿರುವ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಬಿಜೆಪಿ ನಾಯಕರು ಆರೋಪಿಸಿದರು.