ಬೆಳಗಾವಿ: ರಾಜ್ಯದಲ್ಲಿ ರೈತರು, ದೇವಸ್ಥಾನಗಳು, ಮಠಗಳು, ಶಾಲೆಗಳ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಿರುವುದನ್ನು ಪ್ರತಿಭಟಿಸಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ. 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಲು ಒತ್ತಾಯಿಸಿ ಮತ್ತು ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಆಂದೋಲನ ರೂಪಿಸಲಾಗುವುದು. ಕರ್ನಾಟಕ ವಕ್ಫ್ ನಲ್ಲಿ ನಡೆದಿರುವ ಖೊಟ್ಟಿ ದಾಖಲೆಗಳ ಸೃಷ್ಟಿ, ಆ ಮೂಲಕ ಮಾಡಿಕೊಂಡಿರುವ ಲಾಭದ ಕುರಿತು ಜಾರಿ ನಿರ್ದೇಶನಾಲಯ(ಇಡಿ)ದಿಂದ ತನಿಖೆ ನಡೆಸಬೇಕು. 50 ವರ್ಷದ ಹಿಂದಿನ ಗೆಜೆಟ್ ನೆಪವೊಡ್ಡಿ 50 ವರ್ಷ ಯಾವುದೇ ಕ್ರಮ ಕೈಗೊಳ್ಳದೆ ಈಗ ಅಲ್ಪಸಂಖ್ಯಾತರ ಮತ ಬ್ಯಾಂಕ್ ರಾಜಕಾರಣಕ್ಕಾಗಿ ತುಷ್ಟೀಕರಣ ನಡೆಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು ಈ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.
ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ :
ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರ ಜಮೀನುಗಳ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿ ಪರಭಾರೆ ನಿಷೇಧಿಸಿದೆ ಎಂಬುದನ್ನು ಬರೆಯಿಸಿ ರೈತರ ಜಮೀನನ್ನು ಕಬಳಿಸುವ ಹುನ್ನಾರ ಮಾಡುತ್ತಿರುವುದನ್ನು ಖಂಡಿಸಿ ಸೋಮವಾರ ಬೆಳಗ್ಗೆ 11.15 ಗಂಟೆಗೆ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದ ಹತ್ತಿರ ಇರುವ ರಾಣಿ ಚನ್ನಮ್ಮ ಸರ್ಕಲ್ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.