ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿ ಸ್ಪೀಕರ್ ಭೇಟಿಯಾಗಿ ಅಧಿಕೃತವಾಗಿ ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದು, ಇದೀಗ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತನ ಮೂಲಕ ಶೆಟ್ಟರ್ ಅವರನ್ನು ಕರೆತರಲು ಎರಡು ಹೆಲಿಕಾಪ್ಟರ್ ಬುಕ್ ಆಗಿದೆ ಎನ್ನಲಾಗಿದೆ.
ಇನ್ನೊಂದೆಡೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ? ಸ್ವಾತಂತ್ರ ಅಭ್ಯರ್ಥಿ ಆಗ್ತಾರೋ ಅಥವಾ ಕಾಂಗ್ರೆಸ್ ಸೇರುತ್ತಾರೋ? ಎನ್ನುವ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ನಡೆದಿವೆ. ಈ ಹಿನ್ನೆಲೆಯಲ್ಲಿ ಶೆಟ್ಟರ್ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆ. ಕಾಂಗ್ರೆಸ್ಗೆ ಬರುವಂತೆ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ನ ಪ್ರಮುಖ ನಾಯಕರು ಆಹ್ವಾನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಾಂಗ್ರೆಸ್ ಸೇರುವ ಬಗ್ಗೆ ಕೈ ಹಿರಿಯ ಮುಖಂಡ ಹಾಗೂ ಸಂಬಂಧಿ ಶಾಸಕ ಶಾಮನೂರ್ ಶಿವಶಂಕರಪ್ಪ ಜತೆ ಚರ್ಚಿಸಿದ್ದಾರೆ ಎಂದು ಶೆಟ್ಟರ್ ಆಪ್ತ ವಲಯ ಖಚಿತ ಪಡಿಸಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸಹ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಪಕ್ಷಕ್ಕೆ ಬನ್ನಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಕಾಂಗ್ರೆಸ್ಗೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರವಾಸದಲ್ಲಿದ್ದು, ಇದೇ ವೇಳೆ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ಗೆ ಬರಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಕಾಂಗ್ರೆಸ್ ಮೂರು ಪಟ್ಟಿಯನ್ನು ರಿಲೀಸ್ ಮಾಡಿದರೂ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರಕ್ಕೆ ಇಲ್ಲಿಯವರೆಗೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಆಫರ್ ನೀಡಿದೆ. ಇದರ ಜೊತೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡದಿಂದ ಟಿಕೆಟ್ ನೀಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.