ನವದೆಹಲಿ:
ಬಹು ನಿರೀಕ್ಷೆಯಂತೆ
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಪದ ಒಲಿದು ಬಂದಿದೆ. ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತ ಪಡೆದುಕೊಂಡಿದ್ದಾರೆ. ಅವರ ಪ್ರತಿಸ್ಪರ್ಧಿ ಶಶಿ ತರೂರ್ ಅವರಿಗೆ 1072 ಮತ ಸಿಕ್ಕಿವೆ. ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ಚುನಾವಣೆ ನಡೆದಿದೆ. 22 ವರ್ಷಗಳ ಬಳಿಕ ನೆಹರು-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ.
ಖರ್ಗೆ ಅವರು ಈ ಮೊದಲು ಕಾಂಗ್ರೆಸ್ ಪಕ್ಷದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಂಸದೀಯ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಕಳೆದ 5 ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದಾರೆ.
2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಲಬುರ್ಗಿಯಲ್ಲಿ ಬಿಜೆಪಿಯ ಉಮೇಶ ಜಾಧವ ಅವರ ಎದುರು ಸೋಲು ಅನುಭವಿಸಿದ್ದು ಹೊರತುಪಡಿಸಿದರೆ ಬಹುತೇಕ ಎಲ್ಲಾ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಗೆಲುವು ಗೆಲುವು ಸಾಧಿಸಿದ್ದಾರೆ.
ಖರ್ಗೆಯವರು ಹಾಲಿ ರಾಜ್ಯಸಭಾ ಸದಸ್ಯರಾಗಿದ್ದಾರೆ.