ದೆಹಲಿ : ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮತ್ತೊಂದು ಎಲೆಕ್ಷನ್ಗೆ ಅಖಾಡ ರೆಡಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.
ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ. ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13 ರಂದು ಮೂರು ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಿಗಧಿಯಾಗಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗುತ್ತಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳತ್ತ ಎಲ್ಲರ ಚಿತ್ತ :
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಅಕ್ಟೋಬರ್ 22ರಂದು ಅಧಿಸೂಚನೆ ಹೊರಬೀಳಲಿದೆ, ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.
ಜಾರ್ಖಂಡ್ನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ ಜಾರ್ಖಂಡ್ನಲ್ಲಿ ಅಕ್ಟೋಬರ್ 18ರಂದು ಅಧಿಸೂಚನೆ ಹೊರಬೀಳಲಿದೆ, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ. ಎರಡನೇ ಹಂತದ ಚುನಾವಣೆ ನವೆಂಬರ್ 20ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಅಕ್ಟೋಬರ್ 28ರಂದು ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 1 ಕೊನೆಯ ದಿನವಾಗಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಮಹಾರಾಷ್ಟ್ರ ವಿಧಾನಸಭೆಯು 288 ಸ್ಥಾನಗಳನ್ನು ಹೊಂದಿದ್ದು, ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳಲಿದೆ. ಜಾರ್ಖಂಡ್ ವಿಧಾನಸಭೆಯು 81 ಸ್ಥಾನಗಳನ್ನು ಹೊಂದಿದ್ದು, ಇದರ ಅವಧಿ 2025ರ ಜನವರಿ 5ರಂದು ಕೊನೆಗೊಳ್ಳಲಿದೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಒಳಗೊಂಡಿರುವ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಸರ್ಕಾರವು ಆಡಳಿತ ನಡೆಸಿದ್ದು, ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಶರದ್ ಪವಾರ್ (ಶರದ್ಚಂದ್ರ ಪವಾರ್) ನೇತೃತ್ವದ ಎನ್ಸಿಪಿ (ಎಂವಿಎ) ಅನ್ನು ಒಳಗೊಂಡಿರುವ ಪ್ರತಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ವಿರುದ್ಧ ಸ್ಪರ್ಧಿಸಲಿದೆ.