ಬೆಂಗಳೂರು :
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ, ಧಾರವಾಡ, ವಿಜಯಪುರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆ ಸುರಿಯಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರವೂ ಹೆಚ್ಚು ಮಳೆಯಾಗಲಿರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಆರೆಂಜ್ ಅಲರ್ಟ್ ಎಂದರೆ, ಮಳೆ ಪ್ರಮಾಣ 115.6 ಮಿಮೀ ನಿಂದ 204.4 ಮಿಮೀ ಸುರಿಯುವ ಸಾಧ್ಯತೆ ಇರುತ್ತದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಸರಾಸರಿ 40-45 ಕಿ.ಮೀ ವೇಗದಲ್ಲಿ, ಗರಿಷ್ಠ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ವಾತಾವರಣ ಇರುತ್ತದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರಕ್ಕೆ ಶುಕ್ರವಾರ ಮತ್ತು ಶನಿವಾರ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗೆ ಶುಕ್ರವಾರ ಉತ್ತಮ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಮುಂದಿನ ಎರಡು ದಿನ ಬೆಂಗಳೂರು ನಗರದಲ್ಲಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.