ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ. ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿನ ಆರೋಪಿತ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಲ್ಲದೆ, ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿತ್ತು. ಇದರ ಮಾರನೇ ದಿನವಾದ ಬುಧವಾರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ನಡೆಸಿದರು. ಹೈಕೋರ್ಟ್ ಮಂಗಳವಾರದ ಆದೇಶದಲ್ಲಿ ಮೇಲ್ನೋಟಕ್ಕೆ ತನಿಖೆಯ ಅಗತ್ಯತೆ ಪ್ರತಿಪಾದಿಸಿರುವುದನ್ನು ಉಲ್ಲೇಖಿಸಿರುವ ವಿಶೇಷ ವಿಚಾರಣಾಧೀನ ನ್ಯಾಯಾಲಯವು ಡಿಸೆಂಬರ್ 24ರ ಒಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಮೈಸೂರಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶಿಸಿದೆ. ಸಿಆರ್ಪಿಸಿ ಸೆಕ್ಷನ್ 156(3)ರ ಅಡಿ ತನಿಖೆಗೆ ಸೂಚಿಸಲು ಇರುವ ಅಧಿಕಾರವನ್ನು ಬಳಸಿ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ಹೀಗಾಗಿ ಸಿದ್ದರಾಮಯ್ಯ ಸೇರಿ ಇತರೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಲಿದೆ.
ಇದಕ್ಕೂ ಮುನ್ನ, ರಾಜ್ಯಪಾಲರು ತನಿಖೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ ಆದೇಶದ ಪ್ರತಿಯನ್ನು ಅರ್ಜಿದಾರರ ಪರ ಹಿರಿಯ ವಕೀಲರಾದ ಲಕ್ಷ್ಮಿ ಐಯ್ಯಂಗಾರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದರು.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಹಾಗೂ ಇತರೆ ಹೆಸರಿನಡಿ ಐವರನ್ನು ಆರೋಪಿಗಳನ್ನಾಗಿಸಲಾಗಿದೆ. ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ಗಳಾದ 120ಬಿ, 166, 403, 406, 420, 426, 465, 468, 340, 351 (ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ಗಳಾದ 61, 188, 314, 316, 318, 324, 336, 340, ಮತ್ತು 351), ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 1988ರ ಸೆಕ್ಷನ್ 9 & 13, ಬೇನಾಮಿ ಆಸ್ತಿ ವರ್ಗಾವಣೆ ನಿಷೇಧ ಕಾಯಿದೆ 1988 ಮತ್ತು ಕರ್ನಾಟಕ ಭೂಮಿ ವಶ (ಗ್ರ್ಯಾಬಿಂಗ್) ಕಾಯಿದೆ 2011ರ ಸೆಕ್ಷನ್ 3 & 4ರ ಅಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು ಎಂದು ಕೋರಲಾಗಿದೆ.
ತನಿಖೆಗೆ ಹೆದರಲ್ಲ:ತನಿಖೆ ಎದುರಿಸಲು ಸಿದ್ಧ-ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಸಿದ್ದರಾಮಯ್ಯ
ಬೆಂಗಳೂರು: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು.
*ಮೈಸೂರಿಗೆ ಲೋಕಾಯುಕ್ತಕ್ಕೆ ಶಿಫಾರಸ್ಸು:
“ನಿನ್ನೆಯೂ ಕೂಡ ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸ್ಸು ಮಾಡಿರಬೇಕು ಎಂದು ಭಾವಿಸಿದ್ದೇನೆ” ಎಂದರು.
*ಪಿ.ಎನ್.ದೇಸಾಯಿಯವರ ಆಯೋಗದ ತನಿಖೆ ಮುಂದುವರೆಯಲಿದೆ:
ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು. ಮೂಡಾ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗ ಅದರ ತನಿಖೆ ಮುಂದುವರೆಯುತ್ತದೆಯೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನ್ಯಾಯಾಂಗ ತನಿಖೆ ಮುಂದುವರೆಯುತ್ತದೆ ಎಂದರು. ಸಂಪೂರ್ಣ ಪ್ರತಿಕ್ರಿಯೆ ನೀಡಲು ನಾನು ಪೂರ್ಣ ಆದೇಶ ಓದಿದ ಮೇಲೆ ನಾಳೆ ಬೆಳಿಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
—–
ಯುಪಿಎಸ್ಸಿ ಮಾದರಿಯಲ್ಲಿ ಕೆಪಿಎಸ್ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ
ಬೆಂಗಳೂರು: ಕೆ.ಪಿ.ಎಸ್.ಸಿ.ಯಲ್ಲಿ ಯುಪಿಎಸ್ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.
ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು.
ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು.
ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.
ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಲಾಯಿತು.
ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಿದರು.
ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ. ಪಾಟೀಲ, ಈಶ್ವರ್ ಖಂಡ್ರೆ, ಕೆ. ಸುಧಾಕರ್, ಡಾ. ಎಂ.ಸಿ. ಸುಧಾಕರ್, ಎನ್.ಎಸ್. ಬೋಸರಾಜು,, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.