ಬೆಂಗಳೂರು:
‘ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆ, ದಲಿತ ಸಮುದಾಯಗಳ ಹಕ್ಕು ರಕ್ಷಣೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ಕೊನೆಗಾಣಿಸುವ ನಿಟ್ಟಿನಲ್ಲಿ 2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರ ಸಮ್ಮುಖದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಸಂಘಟನೆಯ ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;
‘ಈ ಸಂಘಟನೆಯಲ್ಲಿ 20 ಕ್ಕೂ ಹೆಚ್ಚು ವಿವಿಧ ದಲಿತ ಸಂಘಟನೆಗಳಿದ್ದು, ಇವರು ಎಲ್ಲ ಸಂಘಟನೆಗಳ ಜತೆ ಸೇರಿ ಇಡೀ ರಾಜ್ಯದ ಉದ್ದಗಲದಲ್ಲಿ ಚರ್ಚೆ ಮಾಡಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ತೀರ್ಮಾನ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಯಾವುದೇ ಅಧಿಕಾರಕ್ಕೆ ಆಸೆ ಮಾಡದೇ, ಕೇವಲ ತತ್ವ ಸಿದ್ಧಾಂತಗಳಿಗಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ಉಳಿಸಬೇಕು. ಈ ವಿಚಾರವಾಗಿ ಯಾವ ಪಕ್ಷ ಕಾರ್ಯ ನಿರ್ವಹಿಸಲಿದೆ ಆ ಪಕ್ಷದ ಜತೆ ನಿಲ್ಲಲ್ಲು ತೀರ್ಮಾನ ಮಾಡಿದ್ದಾರೆ. 6 ರಂದು ಇವರು ದೊಡ್ಡ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ತೀರ್ಮಾನಿಸಿದ್ದಾರೆ.ಈ ಸಂಘಟನೆಯಲ್ಲಿ ಕೇವಲ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಮಾತ್ರವಲ್ಲ, ಎಲ್ಲಾ ವರ್ಗದ ಜನರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಎಲ್ಲ ನಾಯಕರ ಪರವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಎಲ್ಲರೂ ರಾಜ್ಯಾದ್ಯಂತ ನಿಮ್ಮ ಪ್ರೀತಿ ವಿಶ್ವಾಸಕ್ಕೆ ಧನ್ಯವಾದಗಳು ಎಂದು ಹೇಳಿದರು.
ಇಂದೂಧರ ಹೊನ್ನಾಪುರ ಮಾತನಾಡಿ, ನಾವು ಆರಂಭದಿಂದಲೂ ಜನಪರ ಹಾಗೂ ಜಾತ್ಯಾತೀತ ಬದುಕು ಕಟ್ಟಿಕೊಡಲು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕಳೆದ 9 ವರ್ಷಗಳಿಂದ ದೇಶದಲ್ಲಾಗುತ್ತಿರುವ ಬೆಳವಣಿಗೆ ಗಮನಿಸಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ತೀರ್ಮಾನಿಸಿ ನಾವು ಕೆಲವು ಷರತ್ತುಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದೇವೆ
ಎಂದು ಹೇಳಿದರು.
ಕೇಂದ್ರ ಹಾಗೂ ರಾಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ. ದಲಿತರ ಹಕ್ಕುಗಳನ್ನು ಕಸಿಯಲಾಗುತ್ತಿದೆ. ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನ ನಿಲ್ಲಿಸಿದ್ದಾರೆ. ಸಂವಿಧಾನ ಬದಲಿಸುತ್ತೇವೆ ಎಂಬ ಬಹಿರಂಗ ಹೇಳಿಕೆ ನೀಡಿದ್ದಾರೆ. ಹೀಗಾಗಿ ದೇಶದಲ್ಲಿ ಕೆಳ ಸಮುದಾಯದವರು, ಮಹಿಳೆಯರು, ಕಾರ್ಮಿಕರು ಬದುಕಲು, ಸಂವಿಧಾನದ ಬಹುತ್ವವನ್ನು ಪುನರ್ಸ್ಥಾಪಿಸಬೇಕು. ಇದಕ್ಕಾಗಿ 2023 ಚುನಾವಣೆಯಲ್ಲಿ ನಾವು 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಂವಿಧಾನ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಮತಾಂತರ ನಿಷೇಧ, ಗೋ ಹತ್ಯೆ ನಿಷೇಧ, ರೈತವಿರೋಧಿ ಹಾಗೂ ಜನವಿರೋಧಿ ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ದಲಿತ ಸಂಘರ್ಷ ಸಮಿತಿ ಐಕ್ಯ ಹೋರಾಟ ಸಮಿತಿ ನಾಯಕರು ಇಂದು ಕೆಲವು ಷರತ್ತುಗಳ ಮೇಲೆ ಮುಂದಿನ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಲು ಮುಂದಾಗಿದ್ದಾರೆ. ಅವರು ಉತ್ತಮ ತೀರ್ಮಾನ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನ ವಿರೋಧಿ ಶಕ್ತಿಗಳನ್ನು ಹಿಮ್ಮೆಟ್ಟಿಸಬೇಕು. ಬಿಜೆಪಿಗೆ ಎಂದಿಗೂ ಸಂವಿಧಾನದ ಮೇಲೆ ಗೌರವವಿಲ್ಲ. ಅಂಬೇಡ್ಕರ್ ಅವರು ಸಂವಿಧಾನ ಜಾರಿಗೆ ತಂದ ನಂತರವೇ ಅದಕ್ಕೆ ವಿರೋಧ ಮಾಡಿದ್ದು, ಈಗಲೂ ಮಾಡುತ್ತಿದ್ದಾರೆ. ಸಂವಿಧಾನ ರಕ್ಷಣೆಯಾಗದೇ, ಶೋಷಿತ ವರ್ಗಗಳ ರಕ್ಷಣೆ ಆಗುವುದಿಲ್ಲ. ಬಿಜೆಪಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ಪಕ್ಷ. ಇಂತಹ ಸಂದರ್ಭದಲ್ಲಿ ದಲಿತ ಸಂಘಟನೆಗಳು ಒಕ್ಕೂಟ ಮಾಡಿಕೊಂಡು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಇಂದು ಅವರು ತಮ್ಮ ಷರತ್ತುಗಳನ್ನು ನಮ್ಮ ಮುಂದೆ ಇಟ್ಟಿದ್ದು, ಕಾಂಗ್ರೆಸ್ ಪಕ್ಷ ಸಂವಿಧಾನದ ತತ್ವ, ಸಿದ್ಧಾಂತ, ನಿಯಮಾವಳಿಗೆ ಕಾಂಗ್ರೆಸ್ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸಂವಿಧಾನ ವಿಚಾರದಲ್ಲಿ ರಾಜಿ ಇಲ್ಲ. ಸಂವಿಧಾನ ರಕ್ಷಣೆ, ಅದರ ಧ್ಯೇಯೋದ್ದೇಶ ಈಡೇರಿಸುವುದು ಕಾಂಗ್ರೆಸ್ ಸಿದ್ಧಾಂತ. ಈ ಸಂಘಟನೆಗಳು ಕಾಂಗ್ರೆಸ್ ಪಕ್ಷ ಬೆಂಬಲಿಸುವ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.