ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನರಿಗೆ ಅಭಯ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.
ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅತೀ ಶೀಘ್ರದಲ್ಲಿ ಜಾರಿಗೊಳಿಸಲಾಗುತ್ತದೆ. ಚುನಾವಣೆಗೂ ಮುನ್ನ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು.
ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಅಧಿಕಾರದ ಅವಧಿಯಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ ಎಂದು ಜನರಿಗೆ ಗೊತ್ತಿದೆ. ಅದಕ್ಕಾಗಿಯೇ ಜನರು ಅವರಿಗೆ ಪಾಠ ಕಲಿಸಿದ್ದಾರೆ ಎಂದು ಅವರು ಹೇಳಿದರು.
ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚೆ ನಡೆಸಿದ್ದೇವೆ. ಮನೆಯ ಯಜಮಾನಿಯನ್ನು ಕುಟುಂಬಸ್ಥರೇ ಗುರುತಿಸಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲದೆ ಸರಳವಾಗಿ ಯೋಜನೆ ಜಾರಿಯಾಗಲಿದೆ ಎನ್ನುವ ವಿಶ್ವಾಸವಿದೆ ಎಂದು ಹೆಬ್ಬಾಳಕರ್ ಹೇಳಿದರು.
ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗುವ ಆತಂಕದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಯಾರೂ ಆತಂಕಪಡಬೇಕಾಗಿಲ್ಲ. ಅಂತೆ ಕಂತೆಗಳಿಗೆ ದಯಮಾಡಿ ಯಾರೂ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಕುರಿತು ಸರಕಾರ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ. ಪ್ರಣಾಳಿಕೆಯಲ್ಲೂ ಈ ವಿಷಯ ಹಾಕಲಾಗಿತ್ತು. ಆ ಬಗ್ಗೆ ಸರಿಯಾದ ನಿರ್ಧಾರಕ್ಕೆ ಸರಕಾರ ಬರಲಿದೆ. ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದು ಕಾಂಗ್ರೆಸ್ ಪಕ್ಷ. ಕೊಟ್ಟ ಭರವಸೆಯನ್ನು ಈಡೇರಿಸಲಾಗುವುದು. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆ ಬೇಕು. ಯಾವುದೇ ಆತಂಕ ಬೇಡ ಎಂದು ಅವರು ತಿಳಿಸಿದರು.
ಬೆಳಗಾವಿ ಜಿಲ್ಲಾ ವಿಭಜನೆಯ ಬಗ್ಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು. ಜಿಲ್ಲಾ ವಿಭಜನೆ ಕೂಗೂ ಮೊದಲಿನಿಂದಲೂ ಇದೆ. ನಮ್ಮ ಸರ್ಕಾರ ಅದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಮಹಿಳೆಯಾಗಿ ಹೇಳ್ತಿನಿ, ಗೋಹತ್ಯೆ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ ಎಂದರು.