ಬೆಂಗಳೂರು:
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಡಾ. ಪದ್ಮಿನಿ ನಾಗರಾಜು ಅವರನ್ನು ಗೌರವ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕನ್ನಡಪರ ಸಂಘಟಕರೂ, ಸಾಹಿತಿಗಳು ಹಾಗೂ ಪರಿಷತ್ತಿನ ಹಿತೈಷಿಗಳೂ ಆದ ಡಾ. ಪದ್ಮಿನಿ ನಾಗರಾಜು ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ ಸಂಖ್ಯೆ 9(2) ರ ಅಡಿಯಲ್ಲಿ ಗೌರವ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ 108 ವರ್ಷಗಳ ಇತಿಹಾಸದಲ್ಲಿ ಡಾ. ಪದ್ಮಿನಿ ನಾಗರಾಜು ಅವರು ʻಮೂರನೇ ಮಹಿಳಾ ಗೌರವ ಕಾರ್ಯದರ್ಶಿಯಾಗಿದ್ದಾರೆ. ಗುರುವಾರ ಡಾ. ಪದ್ಮಿನಿ ನಾಗರಾಜು ಅವರು ತಮ್ಮ ಜವಾಬ್ದಾರಿ ವಹಿಸಿಕೊಂಡಿದ್ದಾರೆ.