ಬೆಂಗಳೂರು: ಬೆಳ್ಳಂದೂರಿನ ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆಬೆಂಗಳೂರು : ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.
ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಪೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಘಟನೆ ಬಗ್ಗೆ ಸಿಸಿಬಿ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ಕೆಫೆಯಲ್ಲಿ ಬಾಂಬ್ ಇಟ್ಟು ಹೋಗಿದ್ದ ಉಗ್ರನನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ.
ಹಲವು ಶಾಲೆಗಳಿಗೆ ಬಂದಿತ್ತು ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರಿನ ಹಲವು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿತ್ತು. ನಂತರ ಅದು ನಕಲಿ ಬೆದರಿಕೆ ಎಂಬುದು ತಿಳಿದು ಬಂದಿದ್ದರೂ, ಬೆದರಿಕೆ ಸಂದೇಶದ ಹಿಂದೆ ವಿದೇಶಿ ಉಗ್ರ ಸಂಘಟನೆಗಳ ಕೈವಾಡ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅದಾದ ನಂತರ ಕೆಲವು ದಿನಗಳಲ್ಲಿ ತಮಿಳುನಾಡು ಮತ್ತು ಇತರ ಕೆಲವು ರಾಜ್ಯಗಳ ಶಾಲೆಗಳಿಗೂ ಬೆದರಿಕೆ ಸಂದೇಶ ಬಂದಿತ್ತು. ಇಂಥ ಸಂದರ್ಭದಲ್ಲಿ ಬೆಂಗಳೂರಿನ ಶಾಲೆಯ ಆವರಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.