ಬೆಳಗಾವಿ : ನನೆಗುದಿಗೆ ಬಿದ್ದಿರುವ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಚಿಕ್ಕೋಡಿಯ ಪದ್ಮಾ ಮಂಗಲ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಘಟಕ ಶನಿವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಏಳನೇ ವೇತನ ಆಯೋಗಕ್ಕಾಗಿ ಸರ್ಕಾರಿ ನೌಕರರ ಸಂಘ ಪಟ್ಟ ಪ್ರಯತ್ನ ಅಷ್ಟಿಷ್ಟಲ್ಲ. ಸರ್ಕಾರ ಹಿಂದೇಟು ಹಾಕಿದ ವೇಳೆಯಲ್ಲಿ ರಾಜ್ಯದಾದ್ಯಂತ ನೌಕರರು ಹೋರಾಟ ನಡೆಸಿದರು. ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿತು. ಸರ್ಕಾರಿ ನೌಕರರ ಒಗ್ಗಟ್ಟು ಮತ್ತು ಸಂಘಟನಾತ್ಮಕ ಪ್ರಯತ್ನದ ಫಲವಾಗಿ ಏಳನೇ ವೇತನ ಆಯೋಗದ ಲಾಭ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಆಗಸ್ಟ್ 17 ರಂದು ಅವರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ ಮಾತನಾಡಿ, ಸರ್ಕಾರಿ ನೌಕರರು ಶ್ರದ್ದೆಯಿಂದ ಕೆಲಸ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಸಂಘಟನೆಯು ನೌಕರರ ಹಿತಕಾಪಾಡುವಲ್ಲಿ ಯಶಸ್ಸು ಗಳಿಸಿದೆ. ಸಂಘದ ಕೆಲಸಗಳು ನಿರಂತರವಾಗಿ ನಡೆಯಲಿ ಎಂದು ಹೇಳಿದರು.
ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 600 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.