ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಮವಾರ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ನೀವು ಶಿವಮೊಗ್ಗದಿಂದ ಸ್ಪರ್ಧೆ ಮಾಡಿರುವುದು ಪಕ್ಷದ ಮುಜುಗರಕ್ಕೆ ಕಾರಣವಾಗಿದೆ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದ್ದು, ಹೀಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಆದೇಶ ಹೊರಡಿಸಿದ್ದಾರೆ.
ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೆ, ರಾಜ್ಯದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕ ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.